ADVERTISEMENT

ಉತ್ತರ ಕನ್ನಡ | ಸಂವಿಧಾನದ ಆಶಯಕ್ಕೆ ತಕ್ಕಂತೆ ಸರ್ಕಾರದ ಕೆಲಸ: ಕೋಟ ಶ್ರೀನಿವಾಸ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 4:46 IST
Last Updated 26 ಜನವರಿ 2023, 4:46 IST
   

ಕಾರವಾರ: 'ಸಂವಿಧಾನದ ಆಶಯಕ್ಕೆ ಬದ್ಧವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಸದೃಢ ಪ್ರಜಾಪ್ರಭುತ್ವ ರೂಪಿಸಲು ಜನರ ಸಹಭಾಗಿತ್ವ ಅಗತ್ಯ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಜಾತಂತ್ರ ಗಟ್ಟಿಯಾಗಿ ಉಳಿಯಲು ಪ್ರತಿಯೊಬ್ಬರೂ ಕಾನೂನನ್ನು ಗೌರವಿಸಬೇಕು. ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲರಯಾಗಿ ರೂಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಟ್ಯಾಗೋರ್ ಕಡಲತೀರದಲ್ಲಿ ₹2 ಕೋಟಿ ವೆಚ್ಚದಲ್ಲಿ ಟುಪಲೋವ್-142ಎಂ ಏರ್ ಕ್ರಾಫ್ಟ್ ಮ್ಯೂಸಿಯಂ ಸ್ಥಾಪಿಸಲಾಗುವುದು.ಕಾರವಾರದ ಭೀಮಕೋಲ ಮಾದರಿಯಲ್ಲಿ ಹೊನ್ನೆಗುಡಿ ಬೀಚ್, ಸಹಸ್ರಲಿಂಗ, ಬನವಾಸಿಯ ಪಂಪವನ, ನಾಗರಮಡಿ ಫಾಲ್ಸ್ ಅಭಿವೃದ್ಧಿಪಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 2.55 ಲಕ್ಷ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೀಡಲಾಗಿದೆ. ಸರ್ಕಾರದ ಜನಪರ ಯೋಜನೆಗಳು ಮನೆ ಬಾಗಿಲಿಗೆ ತಲುಪಿಸಲು ಯಶಸ್ವಿಯಾಗಿದ್ದೇವೆ ಎಂದರು.

15 ತಂಡಗಳು ಪಥಸಂಚಲನ ನಡೆಸಿದವು. ಜಿಲ್ಲೆಯ ಉತ್ತಮ ಗ್ರಾಮ ಒನ್ ಕೇಂದ್ರಗಳಿಗೆ ಬಹುಮಾನ ನೀಡಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ನೀಡಲಾಯಿತು. ತಾಲ್ಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಂದೇಶ ಸಾರುವ ನೃತ್ಯ ಪ್ರದರ್ಶನಗೊಂಡಿತು.

ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.