
ಹೊನ್ನಾವರ: ಯಾದಗಿರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯದುವೀರ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ ಸುಬ್ರಾಯ ನಾಯ್ಕ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯ ಮಟ್ಟದ 'ಡಾ.ಎಚ್.ಎನ್.ಪ್ರಶಸ್ತಿ' ಪ್ರದಾನ ಮಾಡಲಾಯಿತು.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಸಂಘಟಿಸಿದ್ದ ಬೃಹತ್ ಸಮಾವೇಶದಲ್ಲಿ ಸಣ್ಣ ಕೈಗಾರಿಕೆ ಹಾಗೂ ಬೃಹತ್ ಉದ್ಯಮ ಸಚಿವ ಶರಣಬಸಪ್ಪ ದರ್ಶನಾಪುರ ಪ್ರಶಸ್ತಿ ಪ್ರದಾನ ಮಾಡಿದರು.
'ಶಿಕ್ಷಣ ತಜ್ಞ ಹಾಗೂ ವಿಚಾರವಾದಿ ಎಚ್. ನರಸಿಂಹಯ್ಯ ಅವರ ಹೆಸರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರತಿ ವರ್ಷ ಜಿಲ್ಲಾವಾರು ಪ್ರಶಸ್ತಿ ನೀಡಲಾಗುತ್ತಿದ್ದು ಶ್ರೀಕಾಂತ ನಾಯ್ಕ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಪ್ರಸ್ತುತ ಸಾಲಿನ ಪ್ರಶಸ್ತಿ ನೀಡಲಾಗಿದೆ. ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣಕುಮಾರ, ಗುರುಮಿಠಕಲ್ ಖಾಸಾಮಠದ ಶಾಂತಗುರು ಮುರುಘಾರಾಜೇಂದ್ರ ಸ್ವಾಮೀಜಿ, ಮೈಸೂರು ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಮರುಳ ಶಂಕರ ಪೀಠದ ಸಿದ್ದಬಸವ ಕಬೀರಾನಂದ ಸ್ವಾಮೀಜಿ, ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಎಂ.ಜಿ.ಹೆಗಡೆ ಭಾಗವಹಿಸಿದ್ದರು.
ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆ ವಹಿಸಿದ್ದರು. ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಸ್ವೀಕರಿಸಿದ ಶ್ರೀಕಾಂತ ನಾಯ್ಕ ಮಾತನಾಡಿ, 'ವಿಶೇಷವಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಜಾಗೃತಗೊಳಿಸಲು ಯತ್ನಿಸುತ್ತಿರುವ ಪರಿಷತ್‌ನ ಕಾರ್ಯ ಶ್ಲಾಘನೀಯ. ಪ್ರಶಸ್ತಿ ವಿಜೇತರ ಪರವಾಗಿ ಪರಿಷತ್ತಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.