ಅಂಕೋಲಾ: ಮುಡಾ ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೊಳಪಡಿಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿ ನೀಡಿರುವುದನ್ನು ಖಂಡಿಸಿ ಅಂಕೋಲಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಜೈಹಿಂದ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
‘ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತವಾಗಿದ್ದು, ಇದು ಸಂವಿಧಾನ ವಿರೋಧಿ ಕ್ರಮವಾಗಿದೆ. ರಾಜ್ಯಪಾಲರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಏಜೆಂಟರಂತೆ ಕೆಲಸ ಮಾಡುತ್ತಿದ್ದು ರಾಜಭವನವು ರಾಜಕೀಯ ಭವನವಾಗಿ ಮಾರ್ಪಟ್ಟಿದೆ’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ ಆರೋಪಿಸಿದರು.
‘ಜನ ಬೆಂಬಲದಿಂದ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ. ಈ ಅನ್ಯಾಯವನ್ನು ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲದೆ ಜನರು ಖಂಡಿಸುತ್ತಿದ್ದಾರೆ. ರಾಜ್ಯಪಾಲರ ಧೋರಣೆಯನ್ನು ವಿರೋಧಿಸಿ ಆ.19 ರಂದು ಪಕ್ಷದ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ನಡೆಯಲಿದೆ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ, ‘ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಕುಂದು ತರುವ ಬಿಜೆಪಿಯ ಕುತಂತ್ರಕ್ಕೆ ರಾಜ್ಯಪಾಲರು ಜತೆ ನೀಡಿರುವುದು ಸರಿಯಲ್ಲ’ ಎಂದರು.
‘ಬ್ಲ್ಯಾಕ್ ಮೇಲ್ ಮಾಡುವಂತ ಒಬ್ಬ ವ್ಯಕ್ತಿ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ವಿಚಾರಣೆಗೊಳಪಡಿಸಲು ರಾಜ್ಯಪಾಲರು ಅನುಮತಿ ನೀಡಿರುವ ಪಕ್ಷಪಾತದ ನಿರ್ಣಯ’ ಎಂದು ಮುಖಂಡ ಜಿ.ಎಂ.ಶೆಟ್ಟಿ ದೂರಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ಪುರುಷೋತ್ತಮ ನಾಯ್ಕ, ವಕೀಲ ಬಿ.ಡಿ.ನಾಯ್ಕ, ವಿನೋದ ನಾಯಕ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.