ADVERTISEMENT

ಹೊಸ ಜಿಲ್ಲೆಗೆ ಆಗ್ರಹಿಸಿ ಶಿರಸಿ ಬಂದ್: ಮುಚ್ಚಿದ ಅಂಗಡಿಗಳು:ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 6:12 IST
Last Updated 24 ಫೆಬ್ರುವರಿ 2021, 6:12 IST
   

ಶಿರಸಿ: ಉತ್ತರ ಕನ್ನಡ ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಒತ್ತಾಯಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ನಗರದಲ್ಲಿ ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಔಷಧ ಅಂಗಡಿ ಹೊರತುಪಡಿಸಿ ಉಳಿದ ಮಳಿಗೆಗಳು ಸಂಪೂರ್ಣ ಬಂದ್ ಆಗಿವೆ. ಹಳೆ ಬಸ್ ನಿಲ್ದಾಣದಿಂದ ಬಸ್ ಗಳ ಓಡಾಟ ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಶಾಲೆಗಳು ಎಂದಿನಂತೆ ತೆರೆದುಕೊಂಡಿದೆ.

ಹಳೆ ಬಸ್ ನಿಲ್ದಾಣದ ವೃತ್ತದಲ್ಲಿ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಪ್ರತಿಭಟನಾಕಾರರು ಜಮಾಯಿಸಿದ್ದು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಿವೇಕಾನಂದ ವೈದ್ಯ, ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಜಿಲ್ಲೆ ರಚನೆ ಅನಿವಾರ್ಯ. ಆದರೆ, ಈ ಬಗ್ಗೆ ಯಾವ ಜನಪ್ರತಿನಿಧಿಗಳೂ ಮಾತನಾಡದೆ ಇರುವುದು ಬೇಸರ ತಂದಿದೆ ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಮೊದಲು ಪ್ರತ್ಯೇಕ ಜಿಲ್ಲೆ ರಚನೆಯಾಗಲಿ. ಜಿಲ್ಲಾಕೇಂದ್ರದ ಬಗ್ಗೆ ನಂತರ ತೀರ್ಮಾನಿಸೋಣ ಎಂದರು.

ಬನವಾಸಿ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ ಕಾನಳ್ಳಿ, ರಾಜಕೀಯ ಇಚ್ಛಾಶಕ್ತಿ ಕೊರತೆ ಎದುರಾಗಿದೆ. ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದರು. ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಪ್ರಮುಖರಾದ ಎಂ.ಎಂ.ಭಟ್ಟ, ಪರಮಾನಂದ ಹೆಗಡೆ, ಮಂಜು ಮೊಗೇರ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.