
ಪ್ರಜಾವಾಣಿ ಚಿತ್ರ
ಶಿರಸಿ: ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಕಾಂಬಾ ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಆಸ್ಪತ್ರೆಯ ಸಿಬ್ಬಂದಿ ಕೊಠಡಿ ಹಾಗೂ ಪ್ರಮುಖ ದಾಖಲೆಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕಿಟ್ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಬೆಂಕಿಯ ಜ್ವಾಲೆ ವೇಗವಾಗಿ ಹರಡಿದ್ದರಿಂದ ಸ್ಟಾಫ್ ನರ್ಸ್‌ಗಳ ಕೊಠಡಿಯಲ್ಲಿದ್ದ ಕಂಪ್ಯೂಟರ್‌ಗಳು, ಪ್ರಮುಖ ಕಾಗದ ಪತ್ರಗಳು ಹಾಗೂ ಸಿಬ್ಬಂದಿ ಬಟ್ಟೆಬರೆಗಳು ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ ಕನಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.