
ಶಿರಸಿ: ಇಲ್ಲಿನ ಮಾರಿಕಾಂಬಾ ದ್ವೈವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಉತ್ಸವವನ್ನು ವ್ಯವಸ್ಥಿತ ಹಾಗೂ ಶಾಂತಿಯುತವಾಗಿ ನಡೆಸಲು ನಗರದ ಆಡಳಿತ ಸೌಧದಲ್ಲಿ ಶುಕ್ರವಾರ ಪೂರ್ವಸಿದ್ಧತಾ ಹಾಗೂ ಶಾಂತಿ ಸಭೆ ನಡೆಸಲಾಯಿತು.
ಉಪವಿಭಾಗಾಧಿಕಾರಿ ಚಂದ್ರಶೇಖರ ಜಿ.ಆರ್. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಮೂಲಸೌಕರ್ಯಗಳ ಕುರಿತು ಸಂಬಂಧಿತ ವಿವಿಧ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಯಿತು. ಜಾತ್ರೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ನಗರಸಭೆ ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್, ‘ಹರಾಜಾಗಿರುವ ಪ್ಲಾಟ್‌ಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಮತ್ತು ಭಕ್ತರ ವಿಶ್ರಾಂತಿಗಾಗಿ ನಗರದ ನಾಲ್ಕು ಕಡೆಗಳಲ್ಲಿ ಬೃಹತ್ ಟೆಂಟ್‌ಗಳನ್ನು ನಿರ್ಮಿಸಲಾಗುವುದು’ ಎಂದು ತಿಳಿಸಿದರು. ‘ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅಲ್ಲಲ್ಲಿ ಶೌಚಾಲಯ ವ್ಯವಸ್ಥೆ ಹಾಗೂ ಬಸ್ ನಿಲ್ದಾಣದ ಬಳಿ ವಿಶೇಷ ಕಸ ಸಂಗ್ರಹಣಾ ಘಟಕಗಳನ್ನು ಸ್ಥಾಪಿಸಲಾಗುವುದು. ಸುರಕ್ಷತೆಯ ದೃಷ್ಟಿಯಿಂದ ನಗರದಾದ್ಯಂತ ಒಟ್ಟು 150 ಸಿಸಿಟಿವಿ ಕ್ಯಾಮರಾಗಳ ಅಗತ್ಯವಿದ್ದು, ಸದ್ಯ 54 ಕ್ಯಾಮರಾಗಳನ್ನು ಅಳವಡಿಸಲಾಗಿದೆ’ ಎಂದರು.
ಡಿಎಸ್‍ಪಿ ಗೀತಾ ಪಾಟೀಲ ಮಾತನಾಡಿ, ‘8 ವಾಚ್ ಟವರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಪ್ರತಿ ಟವರ್‌ನಲ್ಲಿ ಸಾರ್ವಜನಿಕ ಪ್ರಕಟಣಾ ವ್ಯವಸ್ಥೆಯನ್ನು ಅಳವಡಿಸಿ ತುರ್ತು ಮಾಹಿತಿ ನೀಡಲು ಕ್ರಮ ವಹಿಸಲಾಗಿದೆ. ನಗರದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ನಿರಂತರ ನಿಗಾ ಇರಿಸಲಾಗುವುದು’ ಎಂದು ವಿವರಿಸಿದರು.
ಸಾರಿಗೆ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಸವಿತಾ ಪಾಟೀಲ, ‘ಭಕ್ತರ ಸುಗಮ ಸಂಚಾರಕ್ಕಾಗಿ 180 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದರು. ದೇವಾಲಯ ಆಡಳಿತ ಸಮಿತಿ ಉಪಾಧ್ಯಕ್ಷ ಸುಧೇಶ ಜೋಗಳೇಕರ ಮಾತನಾಡಿ, ‘ವಿಐಪಿ ವಾಹನಗಳ ಸಂಚಾರಕ್ಕೆ ಪರಿಸ್ಥಿತಿಯನ್ನು ಅವಲೋಕಿಸಿ ವ್ಯವಸ್ಥೆ ಮಾಡಲಾಗುವುದು’ ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಸಮುದಾಯದ ಮುಖಂಡ ಅನೀಸ ತಹಶೀಲ್ದಾರ ಮಾತನಾಡಿ, ‘ಶಿರಸಿ ಜಾತ್ರೆಯು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ. ಹಿಂದೂ ಸಮುದಾಯದ ಈ ಸಂಭ್ರಮಕ್ಕೆ ನಮ್ಮ ಸಂಪೂರ್ಣ ಸಹಕಾರವಿದ್ದು, ಶಾಂತಿಯುತ ಆಚರಣೆಗೆ ಸದಾ ಸಿದ್ಧರಿದ್ದೇವೆ’ ಎಂದು ಭರವಸೆ ನೀಡಿದರು.
ಸಿಪಿಐ ಶಶಿಕಾಂತ ವರ್ಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿರುವುದಾಗಿ ತಿಳಿಸಿದರು.
ವೃದ್ಧರು ಹಾಗೂ ವಿಕಲಚೇತನರಿಗೆ ದರ್ಶನದ ಅನುಕೂಲಕ್ಕಾಗಿ ಬೆಳಿಗ್ಗೆ 10 ರಿಂದ 12:30 ಹಾಗೂ ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ವಿಶೇಷ ಸಮಯವನ್ನು ನಿಗದಿಪಡಿಸಲಾಗಿದೆ.ಆರ್.ಜಿ.ನಾಯ್ಕ ಮಾರಿಕಾಂಬಾ ಧರ್ಮದರ್ಶಿ ಮಂಡಳಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.