ADVERTISEMENT

ಶಿರಸಿ ಜಾತ್ರೆಗೆ ಹೈಟೆಕ್ ಭದ್ರತೆ: ಎಸ್‍ಪಿ ದೀಪನ್

ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ, ಕಳ್ಳರ ಪತ್ತೆಗೆ ಫೇಸ್ ರಿಕಗ್ನೇಷನ್ ತಂತ್ರಜ್ಞಾನ ಬಳಕೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 2:39 IST
Last Updated 22 ಫೆಬ್ರುವರಿ 2026, 2:39 IST
ದೀಪನ್ ಎಂ.ಎನ್.
ದೀಪನ್ ಎಂ.ಎನ್.   

ಶಿರಸಿ: ‘ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜನೆ ಜತೆ ತಂತ್ರಜ್ಞಾನ ಆಧಾರಿತ ಕಣ್ಗಾವಲು ಮತ್ತು ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹೇಳಿದರು. 

ನಗರದ ಡಿಎಸ್‌ಪಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿ,​'ಈ ಬಾರಿಯ ಜಾತ್ರಾ ಮಹೋತ್ಸವಕ್ಕಾಗಿ 924 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಜತೆ 200 ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಕೆಎಸ್‌ಪಿಆರ್‌ಪಿ ಹಾಗೂ ಡಿಎಆರ್ ತುಕಡಿಗಳನ್ನು ಕರೆಸಿಕೊಳ್ಳಲಾಗಿದೆ. ಹೊರಗಿನಿಂದ ಬರುವ ಭಕ್ತಾದಿಗಳ ವಾಹನಗಳ ಸಂಚಾರ ದಟ್ಟಣೆ ನಿಯಂತ್ರಿಸಲು ವಿವಿಧ ದಿಕ್ಕುಗಳಿಂದ ಬರುವ ವಾಹನಗಳಿಗೆ ಒಟ್ಟು 25 ಆಯಕಟ್ಟಿನ ಸ್ಥಳಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತ್ಯೇಕ ವೆಬ್‌ಸೈಟ್‌ ಬಿಡುಗಡೆ ಮಾಡಲಾಗಿದೆ. ಈ ವೆಬ್‌ಸೈಟ್ ಮೂಲಕ ವಾಹನ ನಿಲುಗಡೆಗೆ ಇರುವ ಸ್ಥಳಾವಕಾಶದ ಬಗ್ಗೆ ಭಕ್ತರು ಕ್ಷಣ ಕ್ಷಣದ ಮಾಹಿತಿ ಪಡೆಯಬಹುದಾಗಿದೆ' ಎಂದರು. 

​'ಜಾತ್ರಾ ವಲಯದಲ್ಲಿ ಕಳ್ಳತನ ಮತ್ತು ಸರಗಳ್ಳತನದಂತಹ ಅಪರಾಧಗಳನ್ನು ತಡೆಗಟ್ಟಲು ನೂರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಅಪರಾಧಿಗಳನ್ನು ಗುರುತಿಸಲು ಫೇಸ್ ರಿಕಗ್ನೇಷನ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಸಂಶಯಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲು ವಾಚ್ ಟಾವರ್‌ಗಳು ಮತ್ತು ಜಿಲ್ಲಾ ಮಟ್ಟದ ಅಪರಾಧ ತನಿಖಾ ತಂಡಗಳನ್ನು ರಚಿಸಲಾಗಿದೆ. ರಥೋತ್ಸವ ಮತ್ತು ವಿಸರ್ಜನಾ ಮೆರವಣಿಗೆಯ ಮೇಲೆ ನಿಗಾ ಇರಿಸಲು ಡ್ರೋಣ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ' ಎಂದು ಹೇಳಿದರು. 

ADVERTISEMENT

​'ನಗರಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವ ಮೂಲಕ ಪ್ರತಿಯೊಂದು ಚಲನವಲನದ ಮೇಲೆ ಪೋಲಿಸರು ಕಣ್ಣಿಟ್ಟಿದ್ದಾರೆ. ಪಾರ್ಕಿಂಗ್ ಸ್ಥಳಗಳಲ್ಲಿ ಕುಡಿಯುವ ನೀರು, ಬೆಳಕು ಮತ್ತು ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಶಾಂತಿಯುತವಾಗಿ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು' ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಡಿಎಸ್‌ಪಿ ಗೀತಾ ಪಾಟೀಲ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳು ಮತ್ತು ಹಿರಿಯ ನಾಗರಿಕರ ಸಹಾಯಕ್ಕಾಗಿ ಐದು ವಿಶೇಷ ಸಹಾಯ ಕೇಂದ್ರ ತೆರೆಯಲಾಗಿದ್ದು ಮಹಿಳೆಯರ ರಕ್ಷಣೆಗಾಗಿ ಅಕ್ಕ ಪಡೆ ಹಾಗೂ ಹಿರಿಯರಿಗಾಗಿ ಆಸರೆ ವಿಶೇಷ ತಂಡ ರಚಿಸಿ ಭದ್ರತೆ ನೀಡಲಾಗುತ್ತಿದೆ.
- ದೀಪನ್ ಎಂ.ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.