ADVERTISEMENT

ಶಿರಸಿ | ಕೋವಿಡ್–19 ಸೋಂಕು ಸಮುದಾಯಕ್ಕೆ ಹರಡದಂತೆ ಎಚ್ಚರಿಕೆ ವಹಿಸಿ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 13:17 IST
Last Updated 30 ಜೂನ್ 2020, 13:17 IST
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯಲ್ಲಿ ಅಧಿಕಾರಿಗಳು, ವೈದ್ಯರ ಸಭೆ ನಡೆಸಿದರು
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯಲ್ಲಿ ಅಧಿಕಾರಿಗಳು, ವೈದ್ಯರ ಸಭೆ ನಡೆಸಿದರು   

ಶಿರಸಿ: ಕೋವಿಡ್ 19 ನಿಯಂತ್ರಣಕ್ಕೆ ತಾಲ್ಲೂಕಿನಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ಯಾವುದೇ ಕಾರಣಕ್ಕೂ ಈ ರೋಗ ಸಮುದಾಯಕ್ಕೆ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಂಗಳವಾರ ಇಲ್ಲಿ ಕರೆದಿದ್ದ ಅಧಿಕಾರಿಗಳು, ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ 19 ನಿಯಂತ್ರಣಕ್ಕೆ ಹಣಕಾಸಿನ ಕೊರತೆ ಇಲ್ಲ. ವಾರ್ಡ್‌ಗಳನ್ನು ಸಿದ್ಧಪಡಿಸಿ, ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕು ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.

ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿ ಮಾನಸಿಕವಾಗಿ ಸಿದ್ಧರಾಗಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಹೊರತಾದ ಕಾಯಿಲೆಗಳಿಗೆ ನಿರಂತರ ಚಿಕಿತ್ಸೆ ನೀಡಲು ಕ್ರಮವಹಿಸಬೇಕು ಎಂದು ಹೇಳಿದರು.

ADVERTISEMENT

ಪಂಡಿತ್ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ, ಅಗತ್ಯ ಹುದ್ದೆಗಳನ್ನು ಮಂಜೂರುಗೊಳಿಸಲಾಗಿದೆ. ಈ ಬಗ್ಗೆ ಶಾಸಕರು ವಿಶೇಷ ಪ್ರಯತ್ನ ಮಾಡಿದ್ದಾರೆ ಎಂದು ಪಂಡಿತ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಜಾನನ ಭಟ್ಟ ಹೇಳಿದರು.

ತಾಯಿ ಮತ್ತು ಮಗು ಆಸ್ಪತ್ರೆ ಕಟ್ಟಡ ಕಾಮಗಾರಿ ನಿಧಾನವಾಗುತ್ತಿರುವ ಬಗ್ಗೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿ, ಸೆಪ್ಟೆಂಬರ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.