ADVERTISEMENT

ಕೇಂದ್ರಕ್ಕೆ ಸಮನಾದ ವೇತನ ಶತಃಸಿದ್ಧ

ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದಿದ್ದರೆ ಹೋರಾಟ ಅನಿವಾರ್ಯ: ಷಡಾಕ್ಷರಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 16:30 IST
Last Updated 12 ಡಿಸೆಂಬರ್ 2019, 16:30 IST
ಕಾರವಾರದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.
ಕಾರವಾರದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.   

ಕಾರವಾರ: ‘2022ರ ವೇಳೆಗೆ ರಾಜ್ಯ ಸರ್ಕಾರಿ ನೌಕರರೂ ಏಳನೇ ವೇತನ ಆಯೋಗದ ಮೂಲಕ ಕೇಂದ್ರ ಸರ್ಕಾರದ ನೌಕರರಿಗೆ ಸಮಾನವಾದ ವೇತನ ಪಡೆಯುವುದು ಶತಃಸಿದ್ಧ. ಒಂದುವೇಳೆ, ಕೊಡದಿದ್ದರೆ ಹೋರಾಟ ಅನಿವಾರ್ಯ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಚುನಾಯಿತ ಪ್ರತಿನಿಧಿಗಳ ಸಮಾವೇಶ, ಮೇರಿ ದೇವಾಸಿಯಾ ಪುಸ್ತಕ ಬಿಡುಗಡೆ ಮತ್ತು ದಕ್ಷ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರ್ಕಾರಿ ನೌಕರರು ಸಮಾರಂಭದಲ್ಲಿ ಭಾಗವಹಿಸಿದ್ದರು.

‘ನೌಕರರ ಸಂಬಳ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆತಿಳಿಸಲಾಗಿದೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇಮಾರ್ಚ್‌ನಿಂದ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಗೆ ಹಣಕಾಸು ಇಲಾಖೆಗೆ ಅವರು ಆದೇಶಿಸಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಸರ್ಕಾರಿ ನೌಕರರ ಕುಂದುಕೊರತೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಸಮಿತಿ ರಚಿಸಲಾಗುತ್ತದೆ. ನೌಕರರ ಸಂಘದ ತಾಲ್ಲೂಕು ಘಟಕಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದರಲ್ಲಿರುತ್ತಾರೆ.ಈ ಸಮಿತಿಯು ಎರಡು ತಿಂಗಳಿಗೊಮ್ಮೆ ಸಭೆ ಸೇರಲಿದೆ’ ಎಂದರು.

ಕ್ರೀಡಾಕೂಟಕ್ಕೆ ಅನುದಾನ ಹೆಚ್ಚಳ:‘ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಈ ಬಾರಿ ₹ 1 ಕೋಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜಿಲ್ಲಾಮಟ್ಟದ ಕೂಟಕ್ಕೆ ₹ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಬೆಂಗಳೂರಿನ ಸರ್ಕಾರಿ ನೌಕರರ ಭವನದ 80 ಕೊಠಡಿಗಳನ್ನು ನವೀಕರಿಸಲಾಗುತ್ತದೆ. ಅದಕ್ಕೆ ₹ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಮುಂದಿನ ವರ್ಷ ಸಂಘದ ಶತಮಾನೋತ್ಸವ ನಡೆಯಲಿದ್ದು, ಆ ಸಂದರ್ಭದಲ್ಲಿ ನವೀಕೃತ ಭವನವನ್ನು ಲೋಕಾರ್ಪಣೆ ಮಾಡಲಾಗುವುದು’ ಎಂದು ಷಡಾಕ್ಷರಿ ತಿಳಿಸಿದರು.

ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ ಮಾತನಾಡಿ, ‘ಸಂಘದ 99 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರಗಳಲ್ಲಿ ಸಮಾವೇಶಹಮ್ಮಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರ್ಕಾರದೊಂದಿಗೆ ಸಂಧಾನ ಮಾಡೋಣ. ಬೇಡಿಕೆಗಳಿಗೆ ಒಂದುವೇಳೆ ಒಪ್ಪದಿದ್ದರೆ ಮುಷ್ಕರಕ್ಕೆ ಕರೆ ನೀಡೋಣ’ ಎಂದು ಸಲಹೆ ನೀಡಿದರು.

ಬೇಡಿಕೆಗಳ ಮಂಡನೆ: ಎನ್‌.ಪಿ.ಎಸ್ ರದ್ದು ಮಾಡಿ, ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿ ಮಾಡುವುದು, ಕೇಂದ್ರ ಸರ್ಕಾರದ ಮಾದರಿಯಲ್ಲೇ ವೇತನ, ಭತ್ಯೆ ನೀಡುವುದು ಹಾಗೂ ಪ್ರತಿ ತಿಂಗಳ ಐದನೇ ತಾರೀಕಿನೊಳಗಾಗಿ ವೇತನ ಪಾವತಿ ಮಾಡಬೇಕು ಎಂಬ ಬೇಡಿಕೆಗಳನ್ನು ಮಂಡಿಸಲಾಯಿತು.

60ರ ದಶಕದಲ್ಲಿ ಸರ್ಕಾರಿ ನೌಕರರ ಸಂಘಟನೆಗೆ ಶ್ರಮಿಸಿದ್ದ ಮಹಿಳೆ ಮೇರಿ ದೇವಾಸಿಯಾ ಅವರ ಕುರಿತ ಪುಸ್ತಕವನ್ನು ಇದೇವೇಳೆಬಿಡುಗಡೆ ಮಾಡಲಾಯಿತು. ಕೃತಿಯ ಲೇಖಕ, ನಿವೃತ್ತ ಸರ್ಕಾರಿ ಅಧಿಕಾರಿ ಎಂ.ಎಂ.ಖತೀಬ್ ಅವರನ್ನು ಗೌರವಿಸಲಾಯಿತು. 11 ಮಂದಿ ದಕ್ಷ ನೌಕರರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಸಂಘದ ಖಜಾಂಚಿ ಆರ್.ಶ್ರೀನಿವಾಸ್, ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಕೆ.ಕೃಷ್ಣ ಮಾತನಾಡಿದರು. ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ಎಸ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮೀನಾಕ್ಷಿ ಪಾಟೀಲ ಪ್ರಾರ್ಥಿಸಿದರು. ಎಂ.ಆರ್.ನಾಯಕ ಸ್ವಾಗತಿಸಿದರು. ಸುರೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.