
ಕಾರವಾರ: ‘ಬೀದಿನಾಯಿಗಳಿಗೆ ಅನುಕೂಲವಾಗುವಂತೆ ಆಹಾರ ತ್ಯಾಜ್ಯಗಳನ್ನು ಸಾರ್ವಜನಿಕ ಸ್ಥಳದಲ್ಲಿ ಸುರಿಯುತ್ತಿರುವವರ ವಿರುದ್ಧ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬೀದಿನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
‘ಸಾರ್ವಜನಿಕ ಸ್ಥಳಗಳು, ಹೆದ್ದಾರಿಯ ಅಂಚಿನಲ್ಲಿ ಕಸಗಳನ್ನು ಎಸೆಯಲಾಗುತ್ತಿದೆ. ನಿಯಂತ್ರಣಕ್ಕೆ ಸಾಕಷ್ಟು ಬಾರಿ ಸೂಚನೆ ನೀಡಿದ್ದರೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜವಾಬ್ದಾರಿಯುತ ಕ್ರಮ ಜರುಗಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಸಿದರು.
‘ಬೀದಿನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೋರ್ಟ್ ನೀಡಿರುವ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೈಗೊಂಡ ಕ್ರಮಗಳ ಬಗ್ಗೆ ಶೀಘ್ರದಲ್ಲಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ವರದಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ ಆಗಲಿದೆ’ ಎಂದು ಎಚ್ಚರಿಸಿದರು.
‘ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಈ ಸ್ಥಳಗಳಲ್ಲಿ ಆಹಾರ ಪದಾರ್ಥಗಳನ್ನು ಚೆಲ್ಲುವುದು ಮತ್ತು ತ್ಯಾಜ್ಯ ನಿರ್ಮಾಣವಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದರು.
‘ಬೀದಿ ನಾಯಿಗಳ ನಿಯಂತ್ರಣ ವಿಧಾನಗಳು ಮತ್ತು ನಾಯಿ ಕಡಿತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಕುರಿತಂತೆ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ. ರೇಬಿಸ್ ಚುಚ್ಚುಮದ್ದುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬೀದಿನಾಯಿ ಲೆಕ್ಕ ಕೊಡಿ
‘ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಆಸ್ಪತ್ರೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳು ವೈದ್ಯಕೀಯ ಕಾಲೇಜು ಸಾರ್ವಜನಿಕ ಕ್ರೀಡಾಂಗಣಗಳು ಬಸ್ ನಿಲ್ದಾಣ ಬಸ್ ಡಿಪೋಗಳು ರೈಲು ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿರುವ ಬೀದಿ ನಾಯಿಗಳ ಸಂಖ್ಯೆಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪಟ್ಟಿ ಮಾಡಿ ಸಲ್ಲಿಸಿ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು. ‘ಬೀದಿ ನಾಯಿಗಳನ್ನು ಸೆರೆಹಿಡಿದು ಅವುಗಳನ್ನು ನಿಗದಿತ ಸ್ಥಳದಲ್ಲಿ ಬೇಲಿ ಹಾಕಿ ಅಥವಾ ಪಂಜರಗಳಲ್ಲಿ ನಿರ್ವಹಣೆ ಮಾಡಬೇಕು. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.