ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಹಾಗೂ ಆರನೇ ಘಟಕ ನಿರ್ಮಾಣದ ಗುತ್ತಿಗೆಯನ್ನು ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಗುರುವಾರ ಕೇಳಿದ ಪ್ರಶ್ನೆಗೆ ಸಚಿವ ಡಾ.ಜಿತೇಂದ್ರ ಸಿಂಗ್ ಉತ್ತರಿಸಿ, ‘ಐದು ಹಾಗೂ ಆರನೇ ಘಟಕ ನಿರ್ಮಾಣಕ್ಕೆ ₹21,000 ಕೋಟಿ ವೆಚ್ಚವಾಗಲಿದ್ದು, 2030-31ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದರು.
ಇಲ್ಲಿ ತಲಾ 700 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳ ಸ್ಥಾಪನೆಗೆ ಅಣುಶಕ್ತಿ ನಿಯಂತ್ರಣ ಮಂಡಳಿಯು ಅನುಮತಿ ನೀಡಿದೆ. ಕೈಗಾ ಘಟಕದ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟವು 2017ರಲ್ಲಿ ಅನುಮೋದನೆ ನೀಡಿದೆ. ಈ ಘಟಕಗಳ ನಿರ್ಮಾಣ ಪೂರ್ಣಗೊಂಡ ಬಳಿಕ ಕೈಗಾದಲ್ಲಿ ಒಟ್ಟು 2,280 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಪ್ರಸ್ತುತ ತಲಾ 220 ಮೆಗಾವಾಟ್ ಸಾಮರ್ಥ್ಯದ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 880 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಸಚಿವಾಲಯದ ಮಾನದಂಡಗಳ ಪ್ರಕಾರ, ಕರ್ನಾಟಕವು ಈ ಯೋಜನೆಯಿಂದ 700 ಮೆಗಾವ್ಯಾಟ್ ಪಾಲನ್ನು ಮತ್ತು 210 ಮೆಗಾವ್ಯಾಟ್‌ನ ಹಂಚಿಕೆಯಾಗದ ಕೋಟಾದಲ್ಲಿ ಒಂದು ಪಾಲು ಪಡೆಯಲಿದೆ ಎಂದು ಅವರು ವಿವರ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.