ADVERTISEMENT

ಹಳಿಯಾಳ | ‘ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:05 IST
Last Updated 22 ಜೂನ್ 2025, 14:05 IST

ಹಳಿಯಾಳ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಶಾಸಕ ಸುನಿಲ ಹೆಗಡೆ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೆಕರ ಹೇಳಿದರು.

ಶನಿವಾರ ಇಲ್ಲಿನ ಗಣೇಶ ಕಲ್ಯಾಣ ಮಂಟಪದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದರು.

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಶೇ 40 ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸುಳ್ಳು ಆಪಾದನೆ ಮಾಡುತ್ತಿದ್ದವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಶೇ 50ಕ್ಕೂ ಮೇಲ್ಪಟ್ಟು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಗುತ್ತಿಗೆದಾರರ ಕಾಮಗಾರಿ ಬಿಲ್ ಸಹ ಪಾವತಿ ಮಾಡುತ್ತಿಲ್ಲ. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರು ಸರ್ಕಾರದ ಕಾರ್ಯ ವೈಖರಿ ಕುರಿತು ಮುಖ್ಯಮಂತ್ರಿ ಅವರಿಗೆ ತಿಳಿಸಿದರೂ ಕೂಡ ಯಾವುದೇ ಕ್ರಮವಿಲ್ಲ. ವಸತಿ ಯೋಜನೆಯಲ್ಲಿಯೂ ಸಹ ಸಾಕಷ್ಟು ಭ್ರಷ್ಟಾಚಾರವಾಗಿದೆ. ಈ ಬಗ್ಗೆ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಬೇಕಾಗಿದೆ ಎಂದರು.

ADVERTISEMENT

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್ ಘೋಟ್ನೆಕರ ಮಾತನಾಡಿ, ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಸರ್ಕಾರ ಬಡವರ ಪರವಾಗಿಲ್ಲ. ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಿದೆ. ಗುತ್ತಿಗೆದಾರರಿಗೆ ಯಾವುದೇ ರೀತಿಯಿಂದ ಗುತ್ತಿಗೆ ಮಾಡಿದ ಕಾಮಗಾರಿ ಹಣ ಪಾವತಿ ಮಾಡುತ್ತಿಲ್ಲ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಳಿಯಾಳ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ಪಂ ಸೆಟ್ ಅನ್ನು ಅಳವಡಿಸಿಕೊಂಡಿದ್ದವರ ದುಬಾರಿ ವಿದ್ಯುತ್ ಬಿಲ್ಲ ಪಾವತಿಗಾಗಿ ವಿದ್ಯುತ್ ಅನ್ನು ಕಡಿತಗೊಳಿಸುತ್ತಿದ್ದಾರೆ. ರೈತರ ಪಂಪ್‌ ಸೆಟ್‌ಗಳಿಗೆ ಅಳವಡಿಸಿದ ವಿದ್ಯುತ್ ಸಂಪರ್ಕ ಕಡಿತವನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಹೇಳಿದರು.

ಬಿಜೆಪಿ ಮುಖಂಡ ಸಂತೋಷ್ ಘಟಕಾಂಬಳೆ, ತಾನಾಜಿ ಪಟ್ಟೇಕರ, ಯಲ್ಲಪ್ಪಾ ಹೆಳವರ, ಜ್ಞಾನೇಶ್ವರ ಮಾನಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.