ADVERTISEMENT

‘ನೆಗೆಟಿವ್’ ಪ್ರಮಾಣಪತ್ರ ಇಲ್ಲದೇ ಪ್ರಯಾಣಿಸಲು ಬಿಡಬೇಡಿ: ಉಪ ವಿಭಾಗಾಧಿಕಾರಿ ಪತ್ರ

ಕೊಂಕಣ ರೈಲ್ವೆ ಪ್ರಾದೇಶಿಕ ವ್ಯವಸ್ಥಾಪಕರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 15:31 IST
Last Updated 15 ಜನವರಿ 2022, 15:31 IST
ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೊಡ ಮತ್ತು ತಹಶೀಲ್ದಾರ್ ನಿಶ್ಚಲ್ ನರೋನಾ ಅವರು ಕಾರವಾರದ ಶಿರವಾಡ ರೈಲು ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೊಡ ಮತ್ತು ತಹಶೀಲ್ದಾರ್ ನಿಶ್ಚಲ್ ನರೋನಾ ಅವರು ಕಾರವಾರದ ಶಿರವಾಡ ರೈಲು ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು   

ಕಾರವಾರ: ‘72 ಗಂಟೆಗಳ ಒಳಗೆ ಪಡೆದ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಪ್ರಮಾಣಪತ್ರ ಹಾಜರುಪಡಿಸದೇ ಮಹಾರಾಷ್ಟ್ರ, ಗೋವಾ ಮತ್ತು ಕೇರಳದಿಂದ ಬರುವ ಯಾರಿಗೂ ಮುಂದಿನ ಪ್ರಯಾಣಕ್ಕೆ ಅನುವು ಮಾಡಬಾರದು. ಈ ಬಗ್ಗೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ಕೊಡಬೇಕು’ ಎಂದು ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೊಡ ಅವರು ಕೊಂಕಣ ರೈಲ್ವೆಯ ಪ್ರಾದೇಶಿಕ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ.

‘ಎಲ್ಲ ರೈಲು ನಿಲ್ದಾಣಗಳಲ್ಲಿ ಮಹಿಳೆಯರು ಮತ್ತು ಪುರುಷರ ವಿಶ್ರಾಂತಿ ಕೊಠಡಿಗಳನ್ನು ಕ್ವಾರಂಟೈನ್ ಕೊಠಡಿಗಳನ್ನಾಗಿ ತಕ್ಷಣವೇ ಕಾಯ್ದಿರಿಸಬೇಕು. ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಪ್ರಮಾಣಪತ್ರ ಇಲ್ಲದೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಅಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಅವರ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬರುವ ತನಕ ಅಲ್ಲೇ ಉಳಿದುಕೊಳ್ಳಬೇಕು. ಈ ಅವಧಿಯಲ್ಲಿ ಅವರಿಗೆ ಊಟ, ತಿಂಡಿಯನ್ನು ಒದಗಿಸಲು ರೈಲ್ವೆಯು ಕ್ರಮ ಕೈಗೊಳ್ಳಬೇಕು’ ಎಂದು ಅವರು ಪತ್ರ ಬರೆದು ಕೋರಿದ್ದಾರೆ.

ಪೊಲೀಸರ ನಿಯೋಜನೆಗೆ ಸೂಚನೆ:

ADVERTISEMENT

‘ನಿಲ್ದಾಣದ ಎರಡು ಕಡೆ ಆವರಣ ಗೋಡೆಗಳು ಸಮರ್ಪಕವಾಗಿಲ್ಲ. ರೈಲಿನಿಂದ ಇಳಿದ ಪ್ರಯಾಣಿಕರು ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅವುಗಳ ಮೂಲಕ ಹೊರಗೆ ಬರುತ್ತಿದ್ದಾರೆ. ಅವುಗಳನ್ನೂ ಶೀಘ್ರವೇ ದುರಸ್ತಿ ಮಾಡಬೇಕು. ಅಲ್ಲಿಯವರೆಗೆ ಆ ಸ್ಥಳಗಳಲ್ಲಿ ರೈಲ್ವೆ ಪೊಲೀಸರನ್ನು ನಿಯೋಜಿಸಬೇಕು ಎಂದೂ ರೈಲ್ವೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೊಡ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಬರುವ ಪ್ರಯಾಣಿಕರ ಬಳಿ, ಕೋವಿಡ್‌ಗೆ ಸಂಬಂಧಿಸಿದ ದಾಖಲೆಗಳನ್ನು ರೈಲು ನಿಲ್ದಾಣಗಳಲ್ಲಿ ಸೂಕ್ತ ರೀತಿಯಲ್ಲಿ ಪರಿಶೀಲಿಸುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸಾರ್ವಜನಿಕರು ದೂರಿದ್ದರು. ಈ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ವಿವಿಧ ಅಧಿಕಾರಿಗಳು ಶಿರವಾಡದ ರೈಲು ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.