ADVERTISEMENT

ಯುವತಿ ಹತ್ಯೆ: ಶಾಸಕ ಶಿವರಾಮ ಹೆಬ್ಬಾರ ಖಂಡನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 8:04 IST
Last Updated 4 ಜನವರಿ 2026, 8:04 IST
ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ   

ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ನಡೆದ ರಂಜಿತಾ ಬನಸೋಡೆ ಅವರ ಭೀಕರ ಹತ್ಯೆಯನ್ನು ಶಾಸಕ ಶಿವರಾಮ ಹೆಬ್ಬಾರ ಖಂಡಿಸಿದ್ದಾರೆ.

ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಕೃತ್ಯ. ಯಲ್ಲಾಪುರದ ಇತಿಹಾಸದಲ್ಲೇ ಇಂತಹ ಕ್ರೂರ ಘಟನೆ ಕಂಡಿರಲಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದೇನೆ. ಆರೋಪಿಯನ್ನು ಅತ್ಯಂತ ಶೀಘ್ರದಲ್ಲಿ ಬಂಧಿಸಿ, ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಿರ್ದೇಶನಗಳನ್ನು ನೀಡಿದ್ದೇನೆ. ಇಂತಹ ಕ್ರೂರ ಕೃತ್ಯ ಎಸಗಿದವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು; ಯಾವುದೇ ರಾಜಿ, ವಿಳಂಬ ಅಥವಾ ಸಡಿಲಿಕೆ ಸಹಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ಮೃತ ರಂಜಿತಾ ಬನಸೋಡೆ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ತಕ್ಷಣ ಸೂಕ್ತ ಪರಿಹಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಶಾಂತಿ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪೊಲೀಸ್ ಇಲಾಖೆ ಈಗಾಗಲೇ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದು, ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಅವರು ಮನವಿ ಮಾಡಿದ್ದಾರೆ. ಕಾನೂನು ಕೈಗೊಳ್ಳುವ ಕ್ರಮದಿಂದ ತಪ್ಪಿತಸ್ಥರು ತಪ್ಪಿಸಿಕೊಳ್ಳಲಾರರು; ನ್ಯಾಯ ಖಂಡಿತವಾಗಿಯೂ ಸ್ಥಾಪನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.