ಹೊಸಪೇಟೆ ಸಾಧನಾ ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ: ಜಮೀರ್ ಅಹಮದ್
ಹೊಸಪೇಟೆ (ವಿಜಯನಗರ): ರಾಜ್ಯದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಪುನೀತ್ ರಾಜ್‌ಕುಮಾರ್ ಕ್ರೀಡಾಂಗಣದಲ್ಲಿ ಇದೇ 20ರಂದು ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಎರಡು ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಕ್ರೀಡಾಂಗಣದಲ್ಲಿ ಆರಂಭವಾಗಿರುವ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಮಂಗಳವಾರ ಈ ವಿಷಯ ತಿಳಿಸಿದರು.
‘ಸಮಾವೇಶದ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಭೇಟಿ ನೀಡುವರು. ನಾನು ಒಂದು ವಾರ ಇಲ್ಲೇ ಉಳಿದು, ಎಲ್ಲವನ್ನೂ ನೋಡಿಕೊಳ್ಳುವೆ’ ಎಂದರು.
‘ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ, ಎಲ್ಲ ಸಚಿವರು, ಬಹುತೇಕ ಎಲ್ಲ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುವರು’ ಎಂದರು.
‘ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಸಮರ್ಪಣಾ ಸಮಾವೇಶ ಮಾಡಲಾಗುವುದು. ಸಮಾರಂಭದ ಸಕಲ ಸಿದ್ಧತೆಗೆ ತಯಾರಿ ನಡೆಸಲಾಗಿದೆ. ವಿಜಯನಗರ ಜಿಲ್ಲೆಯ ಮೇಲೆ ಸಿಎಂ ಸಿದ್ದರಾಮಯ್ಯರಿಗೆ ವಿಶೇಷ ಕಾಳಜಿ ಇದೆ. ಈ ಭಾಗದ ಎಲ್ಲಾ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಲಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ಸೇರಿದಂತೆ ಆಗಮಿಸುವ ಜನತೆಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.
ಸಂಸದ ಇ.ತುಕಾರಾಂ, ಶಾಸಕರಾದ ಎಚ್.ಆರ್.ಗವಿಯಪ್ಪ, ಜೆ.ಎನ್.ಗಣೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿರಾಜ್ ಶೇಖ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.