ಹೊಸಪೇಟೆ: ‘ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಪ್ರೋತ್ಸಾಹಧನ ನೀಡುವುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 12ರಿಂದ 14ರವರೆಗೆ ಅಹೋರಾತ್ರಿ ಧರಣಿ ರಾಜ್ಯವ್ಯಾಪಿ ನಡೆಯಲಿದೆ’ ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಪ್ರಮೋದ್ ಎನ್. ಹೇಳಿದರು.
ಇಲ್ಲಿ ಶನಿವಾರ ಧರಣಿಯ ಭಿತ್ತಿಫಲಕ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೂ ಧರಣಿ ನಡೆಯಲಿದೆ’ ಎಂದರು.
ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ಮಾತನಾಡಿ, ‘ಮುಖ್ಯಮಂತ್ರಿ ಅವರು ಏಳು ತಿಂಗಳ ಹಿಂದೆ ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿಗೆ ತರಬೇಕು. ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1,000 ಪ್ರೋತ್ಸಾಹಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು. ಕೆಲಸದಿಂದ ತೆಗೆಯಬಾರದು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕೆಂದು ಆಗ್ರಹಿಸಿ ಧರಣಿ ಆಯೋಜಿಸಲಾಗಿದೆ’ ಎಂದರು.
ಸಂಘದ ಹೊಸಪೇಟೆ ನಗರ ಘಟಕದ ಅಧ್ಯಕ್ಷೆ ಗೌರಿ, ಶ್ವೇತಾ, ಲಕ್ಷ್ಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.