
ಹೊಸಪೇಟೆ (ವಿಜಯನಗರ): ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ವಿರುದ್ಧ ಘೋಷಣೆ ಕೂಗಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ‘ಪ್ರಿಯಾಂಕ್ ಖರ್ಗೆ ಚೇಲಾಗಳಿಂದಲೇ ತನಗೆ ತೊಂದರೆಯಾಗಿದೆ ಎಂದು ಸಚಿನ್ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಯಲು ಪ್ರಿಯಾಂಕ್ ರಾಜೀನಾಮೆ ಅನಿವಾರ್ಯ. ಸಚಿನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದರು.
‘ಬಸ್ ಪ್ರಯಾಣ ದರ ಹೆಚ್ಚಿಸಿ ಜನರಿಗೆ ಮೋಸ ಮಾಡಲಾಗಿದೆ. ಗ್ಯಾರಂಟಿ ಹೆಸರಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಅದರ ಎರಡು ಪಟ್ಟು ಕಿತ್ತುಕೊಳ್ಳಲಾಗುತ್ತಿದೆ. ಜನರೇ ಸರ್ಕಾರವನ್ನು ಕಿತ್ತೊಗೆಯುವ ದಿನ ಸಮೀಪಿಸಲಿದೆ’ ಎಂದರು.
ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್ ಮಾತನಾಡಿ, ‘ರಾಜ್ಯ ಸರ್ಕಾರ ಹಲವು ಹಗರಣಗಳಲ್ಲಿ ಮುಳುಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ಆರೋಪಿಸಿದರು.
ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ರಾಜಣ್ಣ, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಸ್.ರಾಘವೇಂದ್ರ, ಸಂಜೀವ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಂಡಿ ಸುವರ್ಣಮ್ಮ, ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.