ADVERTISEMENT

ಬಾಲ್ಯವಿಹಾಹ ತಡೆಗೆ ಎಲ್ಲೆಡೆ ಎಚ್ಚರಿಕೆಯ ಸಂದೇಶಕ್ಕೆ ಸಲಹೆ

ಮಕ್ಕಳ ಸಹಾಯವಾಣಿ ಸಂಖ್ಯೆ, ಗೋಡೆಬರಹ, ನಾಮಫಲಕ ಕಡ್ಡಾಯ ಎಂದ ಆಯೋಗ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:30 IST
Last Updated 18 ಜೂನ್ 2025, 15:30 IST
ಹೊಸಪೇಟೆಯಲ್ಲಿ ಮಂಗಳವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸರ್ವ ಸದಸ್ಯರ ಸಭೆ ನಡೆಯಿತು
ಹೊಸಪೇಟೆಯಲ್ಲಿ ಮಂಗಳವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸರ್ವ ಸದಸ್ಯರ ಸಭೆ ನಡೆಯಿತು   

ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಕಾನೂನಾತ್ಮಕ ದಾಖಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡತಗಳ ಮೇಲೆ ‘ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ’ ಎಂಬ ಟ್ಯಾಗ್‌ಲೈನ್‌ ಮುದ್ರಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದರು.

ಇಲ್ಲಿ ಮಂಗಳವಾರ ರಾಜ್ಯ ಮಕ್ಕಳ ಹಕ್ಕುಗಳ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಆರ್‌ಟಿಇ–2009, ಪೋಕ್ಸೋ-2012 ಹಾಗೂ ಬಾಲ ನ್ಯಾಯ ಕಾಯ್ದೆ-2015ರ ಅನುಷ್ಠಾನದ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

‘ಮಕ್ಕಳ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮತ್ತು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ. ರಾಜ್ಯದಲ್ಲಿ ಬಾಲ ನ್ಯಾಯ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡುವ ಅಗತ್ಯವಿದೆ’ ಎಂದು ಅವರು ಹೇಳಿದರು.

ADVERTISEMENT

‘ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಬಗ್ಗೆ ಸರ್ಕಾರದ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (ಎಸ್‌ಓಪಿ)ಎಲ್ಲಾ ಇಲಾಖೆ ಅಧಿಕಾರಿಗಳು ಅರಿತು ತಮ್ಮ ಇಲಾಖೆ ಸಿಬ್ಬಂದಿಗೆ ಜಾಗೃತಿ ಮೂಡಿಸಬೇಕಿದೆ. ಇದೀಗ  ಮಕ್ಕಳಿಗೆ ಅನ್‌ಲೈನ್ ಚಟುವಟಿಕೆಗಳು ಮತ್ತು ಮಾದಕ ವಸ್ತುಗಳು ವಿಪರೀತ ಮಾರಕವಾಗಿವೆ’ ಎಂದರು.

ಆಯೋಗದ ಸದಸ್ಯ ಶಶಿಧರ ಕೊಸಂಬೆ ಮಾತನಾಡಿ, ಪೋಕ್ಸೋದಂತಹ ಪ್ರಕರಣಗಳಿಗೆ ನಿಯಂತ್ರಿಸಲು ಶಿಕ್ಷಣ ಇಲಾಖೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕಿದೆ. ಅನಧಿಕೃತ ಕೋಚಿಂಗ್ ಸೆಂಟರ್‌ಗಳ ಕಡಿವಾಣ ಹಾಕಬೇಕಿದೆ. ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಕಡ್ಡಾಯವಾಗಿ ಪೊಲೀಸ್ ಇಲಾಖೆಯ ನಿರಾಕ್ಷಪಣಾ ಪತ್ರ ಪಡೆಯಬೇಕು ಎಂದರು.

ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಹೊಸಪೇಟೆ ಪೊಲೀಸ್ ಠಾಣೆಗಳಲ್ಲಿ ತೆರದ ಮನೆ ಕಾರ್ಯಕ್ರಮವನ್ನು ತೆರೆದ ಬಾಗಿಲು ಎಂದು ತಪ್ಪಾಗಿ ನಮೂದಿಸಲಾಗಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ ಅಳವಡಿಸಬೇಕು ಎಂದರು.

ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಂದ ನಿರ್ಮಿತಗೊಂಡ ಕೃಷಿ ಹೊಂಡಗಳು, ಬೊರವೆಲ್‌ಗಳು ಸುತ್ತ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಬಾಲ್ಯ ವಿವಾಹ ವಿರುದ್ಧ ಜಾಗೃತಿ ಮೂಡಿಸುವ ಅಡಿಯೋಗಳನ್ನು ಪ್ರಚಾರ ಪಡಿಸಬೇಕು ಎಂದರು.

ಆಯೋಗದ ಇನ್ನೊಬ್ಬ ಸದಸ್ಯ ಶೇಖರಗೌಡ ರಾಮತ್ನಾಳ ಮಾತನಾಡಿ, ಅಬಕಾರಿ ಇಲಾಖೆ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ವಹಿಸಬೇಕು. ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು.

ಆಯೋಗದ ಸದಸ್ಯರ ಭೇಟಿ ವೇಳೆ ಹಂಪಿ ಗ್ರಾಪಂ ವ್ಯಾಪ್ತಿಯಲ್ಲಿನ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್‌ಪಿ ಶ್ರೀಹರಿಬಾಬು ಬಿ.ಎಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಉಂಕಿ ಇದ್ದರು.

Highlights - ಆಯೋಗದ ಅಧ್ಯಕ್ಷರು, ಎಲ್ಲಾ ನಾಲ್ವರು ಸದಸ್ಯರು ಭಾಗಿ ಬಾಲಕಿಯರ ಹಾಸ್ಟೆಲ್‌ಗಳಲ್ಲಿ ಮಹಿಳಾ ವಾರ್ಡನ್‌ ಇರಬೇಕು ಪೌಷ್ಟಿಕ ಆಹಾರ ಪೂರೈಕೆಗೆ ಕ್ರಮಕ್ಕೆ ಸಲಹೆ

Quote - ಪೋಕ್ಸೋ ಪ್ರಕರಣಗಳು ಬಾಲ್ಯ ವಿವಾಹಗಳನ್ನು ನಿಯಂತ್ರಿಸಲು ಸರ್ಕಾರದ ಸುತ್ತೋಲೆಗಿಂತ ಮಾನವೀಯ ನೆಲೆಗಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ ಕೆ.ನಾಗಣ್ಣ ಗೌಡ ಅಧ್ಯಕ್ಷರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Cut-off box - ಮಕ್ಕಳ ಸಹಾಯವಾಣಿ  ‘ಶಾಲಾ ಕಾಲೇಜು ಕಟ್ಟಡಗಳ ಮೇಲೆ ವಿದ್ಯುತ್ ತಂತಿ ಮಾರ್ಗಗಳಿದ್ದರೇ ಸ್ಥಳಾಂತರಿಸಬೇಕು. ಎಲ್ಲಾ ಶಿಕ್ಷಣ ಸಂಸ್ಥೆಗಳ ಕಚೇರಿ ಆವರಣದಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ ಮತ್ತು ಬಾಲ್ಯ ವಿವಾಹ ಕುರಿತು ನಾಮಫಲಕ ಗೋಡೆ ಬರಹ ಬರೆಸಬೇಕು. ಶೀಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಬೋಧನೆಯನ್ನು ತಪ್ಪಿಸಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರತ್ಯೇಕ ಶೌಚಗೃಹಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು’ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.