ADVERTISEMENT

ಪ್ರೀತಿಯಿಂದ ಕೆಲಸ ಮಾಡಿದರೆ ಯಶಸ್ಸು: ಪ್ರೊ.ಸ.ಚಿ. ರಮೇಶ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 13:58 IST
Last Updated 5 ಆಗಸ್ಟ್ 2022, 13:58 IST
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಸ.ಚಿ. ರಮೇಶ, ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ ಹಾಗೂ ಇತರರು ಸಸಿಗೆ ನೀರೆರೆದು ಉದ್ಘಾಟಿಸಿದರು
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಸ.ಚಿ. ರಮೇಶ, ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ ಹಾಗೂ ಇತರರು ಸಸಿಗೆ ನೀರೆರೆದು ಉದ್ಘಾಟಿಸಿದರು   

ಹೊಸಪೇಟೆ (ವಿಜಯನಗರ): ‘ಪ್ರತಿಯೊಂದು ಕೆಲಸವನ್ನು ಪ್ರೀತಿಯಿಂದ ಮಾಡಿದರೆ ಯಶಸ್ಸು ಸಿಗುತ್ತದೆ’ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ. ರಮೇಶ ಹೇಳಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ವಿಶೇಷ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

‘ಬದುಕಿನಲ್ಲಿ ಆಶಾವಾದ ಬಹಳ ಮುಖ್ಯ. ಆಶಾವಾದ ಇಲ್ಲದ ಬದುಕು ಶೂನ್ಯ. ಸದಾ ಆಶಾವಾದಿಗಳಾಗಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕಾದರೆ ಪರಿಶ್ರಮ ಬಹುಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವುದರ ಮೂಲಕ ವಿದ್ಯಾರ್ಥಿಗಳು ಅನೇಕ ಉದ್ಯೋಗ ಅವಕಾಶಗಳನ್ನು ಪಡೆಯಬಹುದು’ ಎಂದು ತಿಳಿಸಿದರು.

ADVERTISEMENT

ತಂತ್ರಜ್ಞಾನ ಯುಗದಲ್ಲಿ ಯುವಕರು ಅನೇಕ ಮನರಂಜನೆಯ ಮಾಧ್ಯಮಗಳಲ್ಲಿ ತಮ್ಮ ಅಮೂಲ್ಯ ಸಮಯ ಕಳೆಯುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ತರಗತಿಗಳು ಯುವಜನರ ಮನಸ್ಸು ಪರಿವರ್ತಿಸುವುದರ ಮೂಲಕ ಸದೃಢ ಬದುಕನ್ನು ರೂಪಿಸಿಕೊಳ್ಳಲು ಅನುಕೂಲ ಮಾಡಿಕೊಡುತ್ತವೆ ಎಂದರು.

ಕುಲಸಚಿವ ಎ.ಸುಬ್ಬಣ್ಣ ರೈ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗಳು ಹೆಚ್ಚಾದಂತೆ ಮಾನದಂಡ ಹಾಗೂ ಅರ್ಹತೆಗಳು ಹೆಚ್ಚುತ್ತಿವೆ. ಈ ಹಿನ್ನಲೆಯಲ್ಲಿ ಯಶಸ್ಸು ಪಡೆಯಲು ತರಬೇತಿ ಅಗತ್ಯ ಎಂದು ತಿಳಿಸಿದರು.

ಸಿಂಡಿಕೇಟ್ ಸದಸ್ಯ ಓಬಯ್ಯ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಕಾಳಜಿ ವಹಿಸಬೇಕು. ಈ ತರಹದ ಸ್ಪರ್ಧಾತ್ಮಕ ತರಬೇತಿಗಳಲ್ಲಿ ತೊಡಗಿಸಿಕೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂದರು.

ಸಂಚಾಲಕ ಸಿದ್ದಗಂಗಮ್ಮ, ಇರುವ ಜ್ಞಾನವನ್ನು ವಿಸ್ತರಿಸುವ ಸಾಧನವಾಗಿ ತರಬೇತಿಗಳು ಕಾರ್ಯನಿರ್ವಹಿಸುತ್ತಿವೆ. ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನಮಟ್ಟ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ನಿಂಗಪ್ಪ, ಸಿಂಡಿಕೇಟ್ ಸದಸ್ಯರಾದ ಜೈ ಭೀಮಕಟ್ಟಿ, ಸಮೀವುಲ್ಲಾ ಖಾನ್, ಅಭಿವೃದ್ಧಿ ಅಧ್ಯಯನ ವಿಭಾಗದ ಸಂಶೋಧನಾರ್ಥಿಗಳಾದ ನಾಗವೇಣಿ, ಹುಲಿಗೆಮ್ಮ, ಸಂತೋಷ್‌ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.