ADVERTISEMENT

ಹೊರ ರಾಜ್ಯದವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ:

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 13:56 IST
Last Updated 23 ಫೆಬ್ರುವರಿ 2021, 13:56 IST

ವಿಜಯನಗರ (ಹೊಸಪೇಟೆ): ‘ಹೊರರಾಜ್ಯಗಳಿಂದ ನಗರಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್‌–19 ಪರೀಕ್ಷೆ ಮಾಡಿಸಿಕೊಳ್ಳಬೇಕು. ತಾಲ್ಲೂಕು ಆಡಳಿತದಿಂದಲೂ ಅವರ ಮೇಲೆ ನಿಗಾ ವಹಿಸಲಾಗಿದೆ’ ಎಂದು ತಹಶೀಲ್ದಾರ್ ಎಚ್‌. ವಿಶ್ವನಾಥ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಹೊರರಾಜ್ಯದಿಂದ ಬರುವವರ ಮೇಲೆ ನಿಗಾ ವಹಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

‘ಎರಡನೇ ಅಲೆಯ ಭೀತಿ ಕಾಡುತ್ತಿದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ರೀತಿಯ ಚಟುವಟಿಕೆಗಳು ಆರಂಭಗೊಂಡಿವೆ. ಮದುವೆ, ರಾಜಕೀಯ ಸಮಾವೇಶಗಳು ಜರುಗುತ್ತಿವೆ. ಹೋಟೆಲ್‌, ರೆಸ್ಟೊರೆಂಟ್‌, ರೆಸಾರ್ಟ್‌, ಧಾಬಾ ನಡೆಸುವವರು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಪ್ರತಿಯೊಬ್ಬರೂ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸೀನುವಾಗ, ಕೆಮ್ಮುವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಬೇಕು. ಬಳಿಕ ಟಿಶ್ಯೂ ಅನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಉಗುಳಬಾರದು’ ಎಂದರು.

ಆರೋಗ್ಯ ಅಧಿಕಾರಿಗಳಾದ ನಾಗೇಂದ್ರ, ಎಂ.ಪಿ. ದೊಡ್ಡಮನಿ, ನಗರಸಭೆ ಪರಿಸರ ಎಂಜಿನಿಯರ್‌ ಅಶೋಕಕುಮಾರ್‌ ಸಜ್ಜನ್‌, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಆರೋಗ್ಯ ಇನ್‌ಸ್ಪೆಕ್ಟರ್‌ ಟಿ.ಎನ್‌. ಲತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಡಿ. ನಾಗವೇಣಿ, ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಎಂ. ಉಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.