ಹೂವಿನಹಡಗಲಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಅಕ್ಷರ ದಾಸೋಹ ಯೋಜನೆಯ ಬಿಸಿಯೂಟ ಕಾರ್ಯಕರ್ತೆಯರು ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
‘ಸರ್ಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುವ ಕಾರ್ಯಕರ್ತೆಯರಿಗೆ ಸರ್ಕಾರ ಅತೀ ಕಡಿಮೆ ವೇತನ ನೀಡಿ ದುಡಿಸಿಕೊಳ್ಳುತ್ತಿದೆ. ಮುಂಬರುವ ಅಧಿವೇಶನದಲ್ಲಿ ಕಾರ್ಯಕರ್ತೆಯರ ಪರ ಧ್ವನಿ ಎತ್ತಿ, ಪ್ರಸಕ್ತ ಬಜೆಟ್ ನಲ್ಲಿ ವೇತನ ಹೆಚ್ಚಳ ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ಪದಾಧಿಕಾರಿಗಳು ಶಾಸಕ ಕೃಷ್ಣನಾಯ್ಕ ಅವರಿಗೆ ಮನವಿ ಸಲ್ಲಿಸಿದರು.
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಘೋಷಿಸಿರುವಂತೆ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ₹6 ಸಾವಿರಕ್ಕೆ ಹೆಚ್ಚಿಸಬೇಕು. ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೆ ₹2 ಲಕ್ಷ ಇಡಗಂಟು ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.
ಎಐಟಿಯುಸಿ ಜಿಲ್ಲಾ ಸಂಚಾಲಕ ಹಲಗಿ ಸುರೇಶ, ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷೆ ಅನಸೂಯಮ್ಮ, ತಾಲ್ಲೂಕು ಘಟಕದ ಅಧ್ಯಕ್ಷೆ ಪಿ.ಕವಿತಾ, ಸುನೀತಾ, ಲತಾ, ಗಿರಿಜಮ್ಮ, ಭಾಗ್ಯಮ್ಮ, ಮಂಜುಳಾ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.