ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಅರ್ಜಿ ಹಾಕಿರುವ ಸುಮಾರು 7,300 ಜನರಿಗೆ ಹೊಸ ಪಡಿತರ ಚೀಟಿ ವಿತರಣೆಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಒತ್ತಾಯಿಸಿದೆ.
ಇಲ್ಲಿನ ತಾಲ್ಲೂಕು ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿದರು.
‘ರಾಜ್ಯ ಸರ್ಕಾರ ಪಡಿತರ ಚೀಟಿ ಆನ್‌ಲೈನ್ ಮೂಲಕ ಅರ್ಜಿ ಕರೆದಿತ್ತು. ಕೇವಲ ಅರ್ಧ ದಿನಕ್ಕೇ ಅರ್ಜಿ ಸಲ್ಲಿಕೆಯನ್ನು ಸ್ಥಗಿತಗೊಳಿಸಿದ್ದು ಸರಿಯಲ್ಲ, ಇದರಿಂದ ಅರ್ಹ ಬಡವರಿಗೆ ಅನ್ಯಾಯವಾಗಿದೆ. ನಿರಂತರ ಅರ್ಜಿ ಹಾಕಲು ಅವಕಾಶ ಕಲ್ಪಿಸಬೇಕು, ಪಡಿತರ ಚೀಟಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಇರುವ ಕಾಲಮಿತಿ ರದ್ದುಪಡಿಸಿ. ಸರ್ವರ್ ಸಮಸ್ಯೆ ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.
ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಸಿದರು.
ಡಿವೈಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ, ಉಪಾಧ್ಯಕ್ಷ ಬಂಡೆ ತಿರುಕಪ್ಪ, ಸಿಪಿಎಂ ನಾಯಕ ಆರ್.ಭಾಸ್ಕರ ರೆಡ್ಡಿ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.