ಹೊಸಪೇಟೆ (ವಿಜಯನಗರ): ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸದೇ ಮಣ್ಣಿನ ಬಣ್ಣ ರಹಿತ ಗಣೇಶನನ್ನು ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದ್ದಾರೆ.
ಗಣೇಶ ಹಬ್ಬದಲ್ಲಿ ಜಿಲ್ಲಾದ್ಯಂತ ಪಿಒಪಿ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಅವುಗಳನ್ನು ಪೂಜಿಸಿ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ಬಳಿಕ ಗೌರಿಗಣೇಶ ಮೂರ್ತಿಗಳನ್ನು ನಗರಸಭೆ, ಇತರ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಹಾಗೂ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ ನೀರಿಗೆ ವಿಸರ್ಜಿಸಬಾರದು. ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಅನ್ನೂ ಬಳಸಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.