
ಹೊಸಪೇಟೆ (ವಿಜಯನಗರ): ವಿಶೇಷ ಚೇತನರ ವಿಕಲಾಂಗತೆಗಳು ಅವರ ಸಾಧನೆಗಳಿಗೆ ಅಡ್ಡಿಯಾಗಲಾರದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇವರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ನೀಡಲಾಗುವುದು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್ ಹೇಳಿದರು.
ನಗರದ ಸಹಕಾರಿ ಕಲ್ಯಾಣ ಮಂಟಪದ ಬಳಿ ಬುಧವಾರ ಏರ್ಪಡಿಸಿದ್ದ ವಿಶ್ವ ವಿಶೇಷ ಚೇತನರ ದಿನಾಚರಣೆಯಲ್ಲಿ ಪಂ.ಪುಟ್ಟರಾಜ ಗವಾಯಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ಪ್ರದರ್ಶಿಸಿ ಅವರು ಮಾತನಾಡಿದರು.
ವಿಶೇಷ ಚೇತನರಿಗೆ ವಿವಿಧ ಇಲಾಖೆಗಳಿಂದ ಲಭ್ಯವಿರುವ ಸೌಲಭ್ಯಗಳನ್ನು ಪಡೆಯಲು ಪ್ರಾಧಿಕಾರದಿಂದ ಪ್ರಾಮಾಣಿಕ ಪಯತ್ನ ಕಲ್ಪಿಸಬೇಕಿದೆ. ಯಾವುದೇ ರೀತಿಯ ಕಾನೂನು ಸಮಸ್ಯೆಗಳಿದ್ದಲ್ಲಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದರು.
100ಕ್ಕೂ ಹೆಚ್ಚು ವಿಶೇಷ ಚೇತನರು ತ್ರಿಚಕ್ರ ವಾಹನಗಳಲ್ಲಿ ಕಾನೂನು ಜಾಗೃತಿ ಜಾಥಾ ನಡೆಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.