ADVERTISEMENT

ಕಲುಷಿತ ನೀರು ಸೇವನೆ: ಮಕರಬ್ಬಿಯಲ್ಲಿ ವಾಂತಿಭೇದಿ; ಸಾವಿನ ಸಂಖ್ಯೆ 7ಕ್ಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 15:00 IST
Last Updated 10 ಅಕ್ಟೋಬರ್ 2021, 15:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರು ಭಾನುವಾರ ಸಂಜೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7 ಕ್ಕೆ ಏರಿದೆ.

ದೊಡ್ಡಬಾರಿಕರ ನಾಗಮ್ಮ (65) ಗಂಡ ಸಿದ್ದಪ್ಪ ಎಂಬುವವರು ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಮಹಿಳೆಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಗ್ರಾಮದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಭಾನುವಾರ ಬೆಳಿಗ್ಗೆ ಮತ್ತೆ ವಾಂತಿಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರಿಂದ ತಾತ್ಕಾಲಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮಕರಬ್ಬಿಯಲ್ಲಿ 15 ದಿಗಳ ಹಿಂದೆ ಕಲುಷಿತ ನೀರು ಸೇವಿಸಿ 170ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ 33 ಜನರನ್ನು ಹೂವಿನಹಡಗಲಿ, ಹೊಳಲು, ಹುಬ್ಬಳ್ಳಿ, ಹಾವೇರಿ, ರಾಣೇಬೆನ್ನೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ 10 ದಿನಗಳ ಅವಧಿಯಲ್ಲಿ 6 ಜನರು ಮೃತಪಟ್ಟಿದ್ದರು. ಹುಬ್ಬಳ್ಳಿಯ ಆಸ್ಪತ್ರೆಗಳಲ್ಲಿ ಮೂವರು, ದಾವಣಗೆರೆಯಲ್ಲಿ ಇಬ್ಬರು, ಗದಗ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಗ್ರಾಮದಲ್ಲಿ ವಾಂತಿಭೇದಿ ನಿಯಂತ್ರಣದಲ್ಲಿದ್ದರೂ ಈ ಹಿಂದೆ ಅಸ್ವಸ್ಥಗೊಂಡವರ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿದೆ. ಸಾವಿನ ಸರಣಿ ಮುಂದುವರಿದಿರುವುದರಿಂದ ಗ್ರಾಮದಲ್ಲಿ ಆತಂಕದ ಛಾಯೆ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.