ADVERTISEMENT

ಪತ್ರಕರ್ತರ ಕಲ್ಯಾಣ ನಿಧಿಗೆ ₹2 ಲಕ್ಷ: ಇಮಾಮ್ ನಿಯಾಜಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 5:42 IST
Last Updated 30 ಡಿಸೆಂಬರ್ 2025, 5:42 IST
ಹೊಸಪೇಟೆಯಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ವಿಜಯನಗರ ಕಾರ್ಯನಿರತ ಪತ್ರಕರ್ತರ ಸಂಘ ಹೊಸದಾಗಿ ಸ್ಥಾಪಿಸುತ್ತಿರುವ ಪತ್ರಕರ್ತರ ಕಲ್ಯಾಣ ನಿಧಿಗೆ ವೈಯಕ್ತಿಕವಾಗಿ ₹2 ಲಕ್ಷ ದೇಣಿಗೆ ನೀಡುವುದಾಗಿ ಹಾಗೂ ಪತ್ರಕರ್ತರ ಇತರ ಬೇಡಿಕೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವುದಾಗಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎನ್‌.ಎಫ್‌.ಮೊಹಮ್ಮದ್ ಇಮಾಮ್ ನಿಯಾಜಿ ಹೇಳಿದರು.

ಇಲ್ಲಿ ಸೋಮವಾರ ನಡೆದ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಈ ಭರವಸೆ ನೀಡಿದರು.

ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ನೂತನ ಜಿಲ್ಲಾ ಆಸ್ಪತ್ರೆಗೆ ವೈದ್ಯರು, ಇತರ ಸಿಬ್ಬಂದಿ ನೇಮಕಾತಿ ಶೀಘ್ರ ನಡೆಯುವ ಭರವಸೆ ಸರ್ಕಾರದಿಂದ ಸಿಕ್ಕಿದೆ ಎಂದರು.

ADVERTISEMENT

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಸ್ಥಳೀಯ ಪತ್ರಕರ್ತರಿಗೆ ವಸತಿ ನಿವೇಶನ, ಪ್ರಸ್ ಕ್ಲಬ್ ಜಾಗ ಒದಗಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಅರ್ಧಕ್ಕೆ ನಿಂತಿರುವ ವಾರ್ತಾ ಭವನ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪತ್ರಕರ್ತರ ಪ್ರಮುಖ ಬೇಡಿಕೆಯಾಗಿರುವ ಉಚಿತ ಬಸ್ ಪಾಸ್‌, ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಜಾರಿಗೆ ಅಡ್ಡಿಯಾಗಿರುವ ಷರತ್ತುಗಳನ್ನು ಸಡಿಲಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ವಿಕಾಸ್ ಬ್ಯಾಂಕ್‌ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ನೂತನ ಪದಾಧಿಕಾರಿಗಳು ಇದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಎದುರಾಗಿರುವ ಕೆಲವು ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ.
ಬಿ.ಧನಂಜಯಪ್ಪ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ
ಸಮಾಜದಲ್ಲಿ ಪತ್ರಕರ್ತರಿಗೆ ಬಹುದೊಡ್ಡ ಹೊಣೆಗಾರಿಕೆ ಇದ್ದು ನೂತನ ಪದಾಧಿಕಾರಿಗಳಲ್ಲದೆ ಎಲ್ಲ ಪತ್ರಕರ್ತರು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡುವ ವಿಶ್ವಾಸವಿದೆ.
ಎಸ್.ಜಾಹ್ನವಿ ಎಸ್‌ಪಿ

‘ಕಲ್ಯಾಣ ನಿಧಿಗೆ ₹1 ಕೋಟಿ ಸಂಗ್ರಹ ಗುರಿ’ ಸಂಘದ ಜಿಲ್ಲಾ ಘಟದ ಅಧ್ಯಕ್ಷ ಪಿ.ಸತ್ಯನಾರಾಯಣ ಮಾತನಾಡಿ ‘ಪ್ರತಿ ತಾಲ್ಲೂಕಿನಲ್ಲಿ ಪತ್ರಿಕಾ ಭವನಗಳಾಗಬೇಕು. ಕಲ್ಯಾಣ ನಿಧಿಗೆ ಈಗಾಗಲೇ ಸಂಸದರು ₹1 ಲಕ್ಷ ನೀಡಿದ್ದಾರೆ ಹುಡಾ ಅಧ್ಯಕ್ಷರಿಂದ ಇದೀಗ ₹2 ಲಕ್ಷದ ಭರವಸೆ ಸಿಕ್ಕಿದೆ. ವಿವಿಧ ಕಂಪನಿಗಳ ಸಿಎಸ್‌ಆರ್ ನಿಧಿ ಸಹಿತ ಕಲ್ಯಾಣ ನಿಧಿಗೆ ₹1 ಕೋಟಿ ಸಂಗ್ರಹಿಸುವ ಗುರಿ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.