ADVERTISEMENT

ಎಲ್ಲರಿಗೂ ‘ಗ್ಯಾರಂಟಿ’ ಯೋಜನೆ ದೊರಕಿಸಿ: ಪಾಟೀಲ ಬ್ಯಾಡಗಿ

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:48 IST
Last Updated 14 ಫೆಬ್ರುವರಿ 2026, 7:48 IST
ವಿಜಯಪುರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಬ್ಯಾಡಗಿ ಮಾತನಾಡಿದರು
ವಿಜಯಪುರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಬ್ಯಾಡಗಿ ಮಾತನಾಡಿದರು   

ವಿಜಯಪುರ: ‘ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಹಾಗೂ ಅವರು ಸ್ವಾವಲಂಬಿಯಾಗಿ ಜೀವನ ನಡೆಸಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಈ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸುವಂತೆ ನೋಡಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಬ್ಯಾಡಗಿ ಸೂಚಿಸಿದರು. 

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜನಸಾಮಾನ್ಯರ ಬದುಕಿನಲ್ಲಿ ಸುಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳು ಎಲ್ಲ ವರ್ಗದ ಜನರಿಗೂ ಅನುಕೂಲ ಒದಗಿಸಿವೆ’ ಎಂದರು.

ADVERTISEMENT

‘ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ನಾಮಫಲಕ ಪ್ರದರ್ಶಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಮಟ್ಟದ ಸಮಾವೇಶ

‘ಫೆಬ್ರುವರಿ 21ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶ-ಉತ್ಸವ ಹಾಗೂ ಫಲಾನುಭವಿಗಳೊಂದಿಗೆ ಚರ್ಚೆ ಸಮಾರಂಭ ಜರುಗಲಿದೆ’ ಎಂದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು. ಈ ಸೌಲಭ್ಯಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಜನವರಿ ವರೆಗೆ 17,99,34,366 ಮಹಿಳೆಯರು ಪ್ರಯಾಣಿಸಿದ್ದು, ₹607.93 ಕೋಟಿ ವೆಚ್ಚವಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜನವರಿ ಅಂತ್ಯಕ್ಕೆ 4,46,616 ಒಟ್ಟು ಫಲಾನುಭವಿಗಳಿದ್ದು, ಈ ಯೋಜನೆಯಡಿ ₹538.15 ಕೋಟಿ ಜಮಾ ಆಗಿದೆ’ ಎಂದು ಮಾಹಿತಿ ನೀಡಿದರು. 

‘ಜಿಲ್ಲೆಯಲ್ಲಿ 2025ರ ಅಂತ್ಯದ ವರೆಗೆ ಒಟ್ಟು 17,467 ಯುವನಿಧಿ ಫಲಾನುಭವಿಗಳಾಗಿದ್ದು, ಇವರಿಗೆ ₹51,78 ಕೋಟಿಯನ್ನು ನೇರ ವರ್ಗಾವಣೆ (ಡಿ.ಬಿ.ಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಯುವನಿಧಿ ಯೋಜನೆ ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ನಿರುದ್ಯೋಗಿ ಯುವಕರಿಗೆ ಆಶಾಕಿರಣವಾಗಿ ಪರಿಣಮಿಸಿದ್ದು, ಜಿಲ್ಲೆಯು ಯುವನಿಧಿ ಯೋಜನೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನದಲ್ಲಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ್‌, ಪಾಲಿಕೆ ವ್ಯಾಪ್ತಿಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಬ್ಬೀರ ಜಾಗೀರದಾರ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ್ ರಾಠೋಡ, ನಬಿಲಾಲ ನಾಯ್ಕೊಡಿ, ಆನಂದ  ಜಾಧವ, ಮಹಾದೇವಿ ಗೋಕಾಕ, ಜಿ.ಪಂ.ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಗ್ಯಾರಂಟಿ ಯೋಜನೆ ಸಂಬಂಧಿತ ಅಧಿಕಾರಿಗಳಾದ ವಿನಯಕುಮಾರ ಪಾಟೀಲ, ಸಿದ್ದಪ್ಪ ಬಿಂಜಗೇರಿ, ಕೆ.ಕೆ.ಚವ್ಹಾಣ, ಮಹೇಶ ಮಾಳವಾಡೇಕರ, ನಾರಾಯಣಪ್ಪ ಕುರುಬರ ಹಾಗೂ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಇದ್ದರು.

ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಫಲಾನುಭವಿಗಳಿಗೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಆಸಕ್ತಿಯಿಂದ ಹಾಗೂ ಶ್ರದ್ದೆಯಿಂದ ಕೆಲಸ ನಿರ್ವಹಿಸಬೇಕು.
– ಎಸ್.ಆರ್.ಪಾಟೀಲ, ಬ್ಯಾಡಗಿ ಉಪಾಧ್ಯಕ್ಷ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.