
ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ಬುಧವಾರ ಹೊಸಪೇಟೆಯಲ್ಲಿ ಭೇಟಿ ಮಾಡಿದ ಸ್ಥಳೀಯ ಪೌರಕಾರ್ಮಿಕರ ಸಂಘಟನೆಯ ಮುಖಂಡರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರಪಾವತಿ ಪೌರಕಾರ್ಮಿಕರನ್ನು ಕಾಯಂಗೊಳಿಸುವುದು ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಕೋರಿ ಮನವಿ ಸಲ್ಲಿಸಿದರು
ಹೊಸಪೇಟೆ (ವಿಜಯನಗರ): ‘ಸ್ಥಳೀಯ ಆಡಳಿತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಸಾರ್ವಜನಿಕರಿಗೆ ಸಕಾಲದಲ್ಲಿ ಉತ್ತಮ ಸೇವೆ ನೀಡಲಾಗುತ್ತಿಲ್ಲ. ಹೀಗಾಗಿ ಒಂದು ತಿಂಗಳೊಳಗೆ ಅಗತ್ಯವಿರುವ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಭರವಸೆ ನೀಡಿದರು.
ಇಲ್ಲಿ ಬುಧವಾರ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ವಿಜಯನಗರ ನಗರಸಭೆಯಲ್ಲಿ ವಿವಿಧ ಹುದ್ದೆ ಮತ್ತು ಪೌರಕಾರ್ಮಿಕರು ಸೇರಿ ಒಟ್ಟು 540 ಹುದ್ದೆಗಳಿವೆ. ಈ ಪೈಕಿ 260 ಜನ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ
ಸಮರ್ಪಕವಾಗಿ ಯೋಜನೆಗಳು ಅನುಷ್ಠಾಗೊಳಿಸುವಲ್ಲಿ ವಿಳಂಬವಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯವಿರುವ ಸಹಾಯಕ ಎಂಜಿನಿಯರ್, ಆರೋಗ್ಯ ನಿರೀಕ್ಷಕ ಸೇರಿ ಹಲವು ಖಾಲಿ ಹುದ್ದೆಗಳಿಗೆ ತಕ್ಕಂತೆ ಸಿಬ್ಬಂದಿ ನಿಯೋಜಿಸಬೇಕು’ ಎಂದು ನಗರಸಭೆ ಪೌರಾಯುಕ್ತ ಶಿವಕುಮಾರ್ ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ನೇಮಕಾತಿ ಭರವಸೆ ನೀಡಿದರು.
‘15ನೇ ಹಣಕಾಸು ಆಯೋಗದಡಿ ಜಿಲ್ಲೆಯ 6 ತಾಲ್ಲೂಕುಗಳ ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆಗಳಲ್ಲಿ 1,520 ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಪೈಕಿ 1,386 ಕಾಮಗಾರಿ ಪೂರ್ಣಗೊಂಡಿವೆ. 126 ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಇನ್ನುಳಿದ 8 ಟೆಂಡರ್ ಹಂತದಲ್ಲಿವೆ’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಮಾಹಿತಿ ನೀಡಿದರು.
ಪ್ರತಿಕ್ರಿಯಿಸಿದ ಸಚಿವರು, ‘ಇದೇ ಹಣಕಾಸು ವರ್ಷದಲ್ಲಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಜಿಲ್ಲೆಯ ಆರು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಶೇ 80ರಿಂದ ಶೇ 90ರಷ್ಟು ಪ್ರಗತಿ ಸಾಧಿಸಿದ್ದು, ಶೇ 100ರಷ್ಟು ಪ್ರಗತಿ ಸಾಧಿಸಬೇಕು’ ಎಂದರು.
‘ಅನುದಾನದ ಕೊರತೆಯಿಂದ ಹಲವು ಕಾಮಗಾರಿಗಳು ನನೆಗುದಿಗೆ ಬಿದ್ದಿರುವ ಬಗ್ಗೆ ಮಾಹಿತಿ ಇದೆ. ಕಾಮಗಾರಿ ಪೂರ್ಣಗೊಳಿಸಲು ಏನಾದರೂ ಸಮಸ್ಯೆಗಳಿದ್ದಲ್ಲಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಒಂದು ವೇಳೆ ಅದಕ್ಕೆ ಅನುದಾನ ಬೇಕಾದಲ್ಲಿ, ಪ್ರಸ್ತಾವ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸುವ ಬಜೆಟ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಬೇಕಾದ ಅನುದಾನ ದೊರೆಯುವ ನಿರೀಕ್ಷೆ ಇದೆ’ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರಾದ ಎಚ್.ಆರ್. ಗವಿಯಪ್ಪ, ಡಾ.ಎನ್.ಟಿ. ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಮೊಹಮ್ಮದ್ ಇಮಾಮ್ ನಿಯಾಜಿ ಇದ್ದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಸಹ ಒಂದು. ಇಲ್ಲಿಗೆ ಜನರು ಭೇಟಿ ನೀಡುವುದು ಕಡಿಮೆಯಾಗಿರುವ ಕುರಿತು ಪರಿಶೀಲನೆ ನಡೆಸಲಾಗುವುದು ರಹೀಂ ಖಾನ್, ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.