ADVERTISEMENT

ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವು

ಯಾವುದೇ ಕ್ಷಣದಲ್ಲಿ ನದಿಗೆ ನೀರು: ನದಿಪಾತ್ರದ ಜನರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 9:34 IST
Last Updated 9 ಜುಲೈ 2022, 9:34 IST
   

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕವಾಗಿದ್ದು, ಅಣೆಕಟ್ಟೆಯ ಕ್ರಸ್ಟ್‌ಗೇಟ್‌ಗಳಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ದಿನಕ್ಕೆ ಸರಾಸರಿ 8 ರಿಂದ 10 ಟಿಎಂಸಿ ಅಡಿ ನೀರು ಹರಿದು ಬರುತ್ತಿದೆ. ಜಲಾನಯನ ಪ್ರದೇಶ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನದಿಗೆ ಹೊಂದಿಕೊಂಡಂತೆ ಇರುವ ಗ್ರಾಮಗಳ ಜನರು ಎಚ್ಚರದಿಂದ ಇರಬೇಕು. ಗ್ರಾಮಸ್ಥರ ಸುರಕ್ಷತೆಗೆ ವಿಜಯನಗರ, ಬಳ್ಳಾರಿ, ರಾಯಚೂರು, ಮೆಹಬೂಬ್‌ ನಗರ, ಕರ್ನೂಲ್‌ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ 105.788 ಟಿಎಂಸಿ ಅಡಿಗೆ ಕುಸಿದಿದೆ. ಸದ್ಯ ಜಲಾಶಯದಲ್ಲಿ 73.939 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಎರಡ್ಮೂರು ದಿನಗಳಲ್ಲಿ ಸಂಪೂರ್ಣ ಜಲಾಶಯ ತುಂಬಲಿದ್ದು, ನದಿಗೆ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ADVERTISEMENT

ಶುಕ್ರವಾರ ಮಧ್ಯಾಹ್ನ 75,843 ಕ್ಯುಸೆಕ್‌ ಒಳಹರಿವು ಇತ್ತು. ರಾತ್ರಿಗೆ ಒಂದು ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿತ್ತು. ಗುರುವಾರ 60,941 ಕ್ಯುಸೆಕ್‌, ಬುಧವಾರ 34,075 ಕ್ಯುಸೆಕ್‌, ಮಂಗಳವಾರ 22,536 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ಹೀಗೆ ಸತತವಾಗಿ ಒಳಹರಿವು ಹೆಚ್ಚಾಗುತ್ತಿದೆ. ಶುಕ್ರವಾರ ಜಲಾಶಯದಲ್ಲಿ 64.728 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. ಗುರುವಾರ 58.212 ಟಿಎಂಸಿ ಅಡಿ, ಬುಧವಾರ 52.989 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು.

ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಡಗಲಿಯ ನದಿ ತೀರದ ಕಬ್ಬಿನ ಗದ್ದೆಗೆ ನೀರು ನುಗ್ಗಿದು, 50 ಎಕರೆ ಪ್ರದೇಶ ಜಲಾವೃತವಾಗಿದೆ. ಇನ್ನು, ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಶನಿವಾರವೂ ಬಿಟ್ಟು ಬಿಟ್ಟು ತುಂತುರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.