ADVERTISEMENT

ಧರ್ತಿ ಆಬಾ ಅಭಿಯಾನದ ಜಾಗೃತಿ ರಥಕ್ಕೆ ಚಾಲನೆ

ಬುಡಕಟ್ಟು ಸಮುದಾಯ ಹೆಚ್ಚಿರುವ ಗ್ರಾಮಗಳಲ್ಲಿ ಶಿಬಿರ– ಸಂಸದ ಇ.ತುಕಾರಾಂ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:17 IST
Last Updated 27 ಜೂನ್ 2025, 16:17 IST
ಹೊಸಪೇಟೆಯಲ್ಲಿ ಶುಕ್ರವಾರ ಸಂಸದ ಇ.ತುಕಾರಾಂ ಅವರು ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಜಾಗೃತಿ ರಥಕ್ಕೆ ಚಾಲನೆ ನೀಡಿದರು
ಹೊಸಪೇಟೆಯಲ್ಲಿ ಶುಕ್ರವಾರ ಸಂಸದ ಇ.ತುಕಾರಾಂ ಅವರು ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಜಾಗೃತಿ ರಥಕ್ಕೆ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಗುರಿ ನಮ್ಮದು, ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಲಿ ಎಂದು ಸಂಸದ ಇ.ತುಕಾರಾಂ ತಿಳಿಸಿದರು.

ಇಲ್ಲಿ ಶುಕ್ರವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ವರ್ಗಗಳ ಸಮುದಾಯದ ಜನರು ವಾಸಿಸುವ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಅಭಿಯಾನದ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಜೂನ್‌ 30ರವರೆಗೆ ವಿವಿಧ ಗ್ರಾಮಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಪ್ರಚಾರದ ವಾಹನಗಳ ಮೂಲಕ ಪ್ರಚಾರ ಮಾಡಲಾಗುವುದು. ಅಯಾ ಹಳ್ಳಿಗಳಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಲು ನಮ್ಮ ಅಧಿಕಾರಿಗಳು ನಿಗದಿತ ದಿನಾಂಕಗಳಲ್ಲಿ ಲಭ್ಯವಿರಲಿದ್ದಾರೆ’  ಎಂದು ಸಂಸದರು ಹೇಳಿದರು.

ADVERTISEMENT

‘ಫಲಾನುಭವಿಗಳು ಯೋಜನೆಯ ಸದ್ಬಳಕೆ ಮಾಡಬೇಕು. ಅಭಿಯಾನದಡಿ ಗ್ರಾಮ ಮಟ್ಟದ ಶಿಬಿರಗಳಲ್ಲಿ ಆರೋಗ್ಯ, ಆಹಾರ, ಪಂಚಾಯಿತಿ ರಾಜ್, ಗ್ರಾಮೀಣಾಭಿವೃದ್ಧಿ, ಸಾಮಾಜಿಕ ನ್ಯಾಯ, ಕೃಷಿ, ಭೂಮಾಪನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಹಯೋಗವನ್ನು ಸಾಧಿಸುವುದರ ಮೂಲಕ ಈ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ನೇಮಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್. ಮೊಹಮ್ಮದ್ ಇಮಾಮ್ ನಿಯಾಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ಕುರಿ ಶಿವಮೂರ್ತಿ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಮುಖಂಡರಾದ ಮಹ್ಮಮದ್ ರಫೀಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.