
ಹೊಸಪೇಟೆ (ವಿಜಯನಗರ): ಸರ್ಕಾರಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಸೇರಿದಂತೆ ಬಹುಪೋಷಕಾಂಶಗಳ ನ್ಯೂನತೆಯನ್ನು ನಿವಾರಿಸಲು ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ತಂದಿರುವುದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಅವರು ಬುಧವಾರ ನಗರದ ಪುಣ್ಯಮೂರ್ತಿ ರಾಘಪ್ಪ ಶೆಟ್ಟಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿ ಪರಿಸರ ಪುನಶ್ಚೇತನ ನಿಗಮದ ವತಿಯಿಂದ (ಕೆಎಂಇಆರ್‌ಸಿ) ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿ (ಸಿಇಪಿಎಂಐಜೆಡ್) ಕಾರ್ಯಕ್ರಮದಡಿ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕ ಅಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಮಹಾತ್ವಕಾಂಕ್ಷಿಯಿಂದಾಗಿ ಗಣಿಬಾಧಿತ 4 ಜಿಲ್ಲೆಗಳ 10 ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪೂರಕವಾಗಿ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸಲಾಗಿದೆ. ಇದರಿಂದ ಸರ್ಕಾರಿ ಶಾಲಾ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗಲಿದೆ. ಶಾಲಾ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಾಳಜಿಗೆ ಸರ್ಕಾರ ಆದ್ಯತೆ ನೀಡಿರುವುದು ಗಮನಾರ್ಹ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಮಕ್ಕಳಿಗೆ ಉಣಬಡಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ನಗರಸಭೇ 31ನೇ ವಾರ್ಡಿನ ಸದಸ್ಯ ತಾರಿಹಳ್ಳಿ ಜಂಬುನಾಥ ಅಧ್ಯಕ್ಷತೆ ವಹಿಸಿದ್ದರು.
ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಬಿಇಒ ಶೇಖರಪ್ಪ ಹೊರಪೇಟೆ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.