ADVERTISEMENT

ಹಿಂದುಳಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸಿ ಚುನಾವಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 9:38 IST
Last Updated 7 ಜೂನ್ 2022, 9:38 IST
ಹಿಂದುಳಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸಿ ಚುನಾವಣೆಗೆ ಆಗ್ರಹ
ಹಿಂದುಳಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸಿ ಚುನಾವಣೆಗೆ ಆಗ್ರಹ   

ಹೊಸಪೇಟೆ (ವಿಜಯನಗರ): ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸಿದ ನಂತರವೇ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ತಹಶೀಲ್ದಾರ್‌ ಮೂಲಕ ಹಿಂದುಳಿದ ವರ್ಗಗಳ ವಿಚಾರಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದರು.

ಒಕ್ಕೂಟದ ಅಧ್ಯಕ್ಷ ವೈ.ಯಮುನೇಶ್, ಹಾಲಿ ಚುನಾವಣಾ ಮೀಸಲಾತಿ ಪದ್ಧತಿಯು 1993ರಲ್ಲಿ ಜಾರಿಗೆ ಬಂದಿದ್ದು, ಇದು ಅವೈಜ್ಞಾನಿಕವಾಗಿದೆ. 2010ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿಯಿಂದ ವಂಚಿತವಾಗಿರುವ ಹಿಂದುಳಿದ ಜಾತಿಗಳಿಗೆ ಸೂಕ್ತ ಮೀಸಲಾತಿ ನೀಡಬೇಕು. ರಾಜ್ಯ ಸರ್ಕಾರವು ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಭಕ್ತವತ್ಸಲಂ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದೆ. ಈ ಆಯೋಗವು ರಾಜಕೀಯವಾಗಿ ಹಿಂದುಳಿದ ಜಾತಿಗಳನ್ನು ಗುರುತಿಸಿ ಅಂಕಿ ಅಂಶಗಳ ಆಧಾರದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸಲು 8 ವಾರಗಳ ಕಾಲವಕಾಶ ನೀಡಿದೆ. ಆಯೋಗವು ಸಾರ್ವಜನಿಕ ಸಂಘ ಸಂಸ್ಥೆಗಳಿಂದ ಮನವಿ, ಸಲಹೆಗಳನ್ನು ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಹಿಂದಿನ ಸರ್ಕಾರದ ಅವಧಿಯಲ್ಲಿ 2015ರಲ್ಲೇ ನ್ಯಾ.ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗವು ರಾಜಕೀಯವಾಗಿ ಹಿಂದುಳಿದ ಜಾತಿಗಳ ಮಾಹಿತಿ ಮತ್ತು ಅಂಕಿ ಅಂಶಗಳ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯ ದತ್ತಾಂಶಗಳನ್ನೇ ಮಾನದಂಡವನ್ನಾಗಿಟ್ಟುಕೊಂಡು ರಾಕೀಯವಾಗಿ ಹಿಂದುಳಿದ ಜಾತಿಗಳನ್ನು ಗುರುತಿಸಬೇಕು. 1993ರಿಂದ ಇದುವರೆಗೆ ನಡೆದ ಚುನಾವಣೆಗಳಲ್ಲಿ ವಿವಿಧ ಜಾತಿಗಳು ಹೊಂದಿದ್ದ ಸ್ಥಾನಗಳ ಸಂಖ್ಯೆ ಹಾಗೂ ಪ್ರಾತಿನಿಧ್ಯ ಹೊಂದಿರದ ಜಾತಿಗಳ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ವಿಧಾನಸಭೆ, ಲೋಕಸಭೆಯಲ್ಲಿ ರಾಜಕೀಯ ಮೀಸಲಾತಿ ಇಲ್ಲದ ಅಸಂಘಟಿತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಅಥವಾ ಪ್ರತ್ಯೇಕವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಮುಖಂಡರಾದ ಆರ್.ಕೊಟ್ರೇಶ್, ರವಿಶಂಕರ್‌ ದೇವರಮನಿ, ಜಿ.ರುದ್ರಪ್ಪ, ಐಲಿ ಸಿದ್ದಣ್ಣ, ಯು.ಅಶ್ವತಪ್ಪ, ಯು.ನೀಲಕಂಠ, ಕೆ.ಗೋಪಾಲರಾವ್, ರವಿಕುಮಾರ್, ಮಧುಸೂದನ್, ಅಗಳಿ ಬಾಸ್ಕರ್, ಕೆ.ವೀರಣ್ಣ, ಡಿ.ರಾಮಕೃಷ್ಣ, ಗೋಪಿನಾಥ, ಇ.ಕುಮಾರಸ್ವಾಮಿ, ಬಿ.ವೀರಪ್ಪ, ಕೆ.ಶ್ರೀನಿವಾಸ್, ಎ.ಎಂ. ಬಸವರಾಜ, ಗೌಡಣ್ಣನವರ್, ಕೆ.ನೀಲಪ್ಪ, ಆರ್.ಭೀಮಪ್ಪ, ಪ್ರಶಾಂತ್, ರಾಮ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.