ADVERTISEMENT

ಪ. ಜಾತಿ, ಪ, ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಒಂದು ವಾರ ಧರಣಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 12:58 IST
Last Updated 11 ಏಪ್ರಿಲ್ 2022, 12:58 IST
ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಧರಣಿ ಆರಂಭಿಸಿದರು.
ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಧರಣಿ ಆರಂಭಿಸಿದರು.   


ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಧರಣಿ ಆರಂಭಿಸಿದರು.

ಮಹರ್ಷಿ ವಾಲ್ಮೀಕಿ ಹಾಗೂ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಮುಖಂಡರು, ಪಾರಿವಾಳ ಬಿಟ್ಟು ಧರಣಿಗೆ ಚಾಲನೆ ನೀಡಿದರು. ಏ. 17ರ ವರೆಗೆ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.

ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿಯನ್ನು ಕ್ರಮವಾಗಿ ಶೇ 15ರಿಂದ ಶೇ 17, ಶೇ 3ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು. ಅನೇಕ ಸಲ ಹೋರಾಟ ಮಾಡಿದರೂ ಸರ್ಕಾರ ಸ್ಪಂದಿಸಿಲ್ಲ. ಅನಿವಾರ್ಯವಾಗಿ ಒಂದು ವಾರ ನಿರಂತರ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖಂಡ ಮರಡಿ ಜಂಬಯ್ಯ ನಾಯಕ ತಿಳಿಸಿದರು.

ADVERTISEMENT

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಅನೇಕ ತಿಂಗಳಾಗಿವೆ. ಎರಡು ತಿಂಗಳಿಂದ ಹರಿಹರದ ವಾಲ್ಮೀಕಿ ಮಹರ್ಷಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಮೌನ ವಹಿಸಿದೆ. ಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಏ.16, 17ರಂದು ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಆದರೆ, ಆ ಸ್ಥಳಕ್ಕೆ ಹೋಗುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಕ್ಕೆ ಬರುವುದಕ್ಕೂ ಮುಂಚೆ ಬೆಂಗಳೂರಿನಲ್ಲಿ ಮೀಸಲಾತಿ ಹೆಚ್ಚಿಸಿ ಆದೇಶಿಸಬೇಕು. ಆ ಪತ್ರವನ್ನು ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಕೈಗಿತ್ತ ನಂತರವೇ ಬರಬೇಕು ಎಂದು ಆಗ್ರಹಿಸಿದರು.

ಮುಖಂಡ ಎಂ.ಸಿ. ವೀರಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ/ಪಂಗಡದವರು ಒಟ್ಟಿಗೆ ಹೋರಾಟ ನಡೆಸುತ್ತಿರುವುದು ವಿಶೇಷ. ಇದು ಐತಿಹಾಸಿಕ ದಿನ. ಈ ಒಗ್ಗಟ್ಟು ಸದಾ ಇರಬೇಕು ಎಂದರು.

ಮುಖಂಡರಾದ ದುರುಗಪ್ಪ ಪೂಜಾರಿ, ಜಂಬಯ್ಯ ನಾಯಕ, ನಾಣಿಕೇರಿ ಕನಕಪ್ಪ, ಬೆಳಗೋಡು ರುದ್ರಪ್ಪ, ಕಟಿಗಿ ಜಂಬಯ್ಯ, ಗುಜ್ಜಲ್ ನಾಗರಾಜ, ಗುಜ್ಜಲ್‌ ರಘು, ಗುಜ್ಜಲ್ ಶ್ರೀನಾಥ್, ಗುಜ್ಜಲ್ ಚಂದ್ರಶೇಖರ್, ಯಂಕಾಳಿ, ಸೋಮಶೇಖರ್ ಬಣ್ಣದಮನೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.