ADVERTISEMENT

ಕೂಡ್ಲಿಗಿ: ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 20 ಮೇ 2024, 14:05 IST
Last Updated 20 ಮೇ 2024, 14:05 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಸಿಪಿಐ ಪಕ್ಷದ ಕಾರ್ಯಕರ್ತರು ಕೂಡ್ಲಿಗಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಸಿಪಿಐ ಪಕ್ಷದ ಕಾರ್ಯಕರ್ತರು ಕೂಡ್ಲಿಗಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕೂಡ್ಲಿಗಿ: ‘ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರ ವಿತರಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಸಿಪಿಐ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೋಮವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಎಐಕೆಎಸ್ ರಾಜ್ಯ ಉಪಾಧ್ಯಕ್ಷ ಎಚ್.ವೀರಣ್ಣ ಮಾತನಾಡಿ, ‘ತಾಲ್ಲೂಕಿನಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ರೈತರಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ವಿತರಣೆಗೆ ಮುಂಜಾಗ್ರತೆ ಕ್ರಮ ವಹಿಸಬೇಕು. ರಸಗೊಬ್ಬರ ಹಾಗೂ ಬೀಜವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ಮಧ್ಯವರ್ತಿಗಳ ಹಾವಳಿ ಇಲ್ಲದೆ ಕೃಷಿ ಯಂತ್ರೋಪಕರಣಗಳನ್ನು ನೇರವಾಗಿ ರೈತ ಫಲಾನುಭವಿಗಳಿಗೆ ನೀಡಬೇಕು’ ಎಂದರು.

ತಾಲ್ಲೂಕಿನ ಪೂಜರಹಳ್ಳಿ ಕೆರೆಯನ್ನು ಖಾಸಗಿ ವ್ಯಕ್ತಿಯೊಬ್ಬರು ಸಾಗುವಳಿ ಮಾಡುತ್ತಿರುವುದನ್ನು ನಿಲ್ಲಿಸಿ, ಕೆರೆಯನ್ನು ಸಾರ್ವಜನಿಕ ಕೆರೆಯನ್ನಾಗಿ ಮಾಡಬೇಕು, ಅಲ್ಲಿ ಗೋಶಾಲೆ ಸ್ಥಾಪನೆ ಮಾಡಬೇಕು’ ಎಂದು ತಹಶೀಲ್ದಾರರಿಗೆ ಒತ್ತಾಯಿಸಿದರು.

ADVERTISEMENT

‘ಜಲಜೀವನ್ ಮಿಷನ್ ಯೋಜನೆಯಲ್ಲಿ ಹಳ್ಳಿಗಳಲ್ಲಿ ಕಾಮಗಾರಿ ಪೂರ್ಣಗೊಳಿಸದ ಹಾಗೂ ಕಳಪೆ ಕಾಮಗಾರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾಮಗಾರಿ ಮಾಡಲಾಗಿದ್ದು, ಪೈಪ್‌ಲೈನ್ ಅಳವಡಿಸಲು ತೋಡಿದ ಗುಂಡಿಗಳನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದ ಜನರು ಓಡಾಡುವುದೇ ದುಸ್ಥರವಾಗಿದೆ. ಕೆಲವು ಗ್ರಾಮಗಳಲ್ಲಿ ಕಾಮಗಾರಿ ನಡೆಯದೆ ಇದ್ದರೂ ಅನುದಾನ ಬಿಡುಗಡೆಯಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ರಾಜು ಪಿರಂಗಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವೈ.ರವಿಕುಮಾರ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್, ಸಹಾಯಕ ಕೃಷಿ ಅಧಿಕಾರಿ ನೀಲಾ ನಾಯ್ಕ್ ಮನವಿ ಸ್ವೀಕರಿಸಿದರು.

ಎಐಕೆಎಸ್ ಜಿಲ್ಲಾ ಅಧ್ಯಕ್ಷ ಗುಡಿಹಳ್ಳಿ ಹಾಲೇಶ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಯು. ಪೆನ್ನಪ್ಪ, ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕರಿಯಪ್ಪ ವೈ. ಮಲ್ಲಿಕಾರ್ಜುನ, ಸಿದ್ದಲಿಂಗ ಸ್ವಾಮಿ, ಟ್ಯಾಂಕಿ ತಿಪ್ಪೇಸ್ವಾಮಿ, ಬಸಣ್ಣ, ಹುಲಕುಂಟಿ ಗೆದ್ದಯ್ಯ, ಬೋರಣ್ಣ, ಅಂಜಿನಿ, ಬಾಲರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.