ADVERTISEMENT

‘ಉಜ್ವಲ ಭಾರತ, ಉಜ್ವಲ ಭವಿಷ್ಯ' ವಿದ್ಯುತ್ ಮಹೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 25 ಜುಲೈ 2022, 16:10 IST
Last Updated 25 ಜುಲೈ 2022, 16:10 IST
   

ಹೊಸಪೇಟೆ (ವಿಜಯನಗರ): ’ವಿದ್ಯುತ್ ಸಂಪರ್ಕ ಸೇರಿದಂತೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಗ್ರಾಮೀಣ ಭಾಗದವರಿಗೆ ಅದರಲ್ಲೂ ರೈತರಿಗೆ ನೀಡಬೇಕು’ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್‌ ಸಿಂಗ್‌ ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಜೆಸ್ಕಾಂನಿಂದ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ಉಜ್ವಲ ಭಾರತ, ಉಜ್ವಲ ಭವಿಷ್ಯ' ವಿದ್ಯುತ್ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರದ ಸೌಲಭ್ಯಗಳ ಪ್ರಯೋಜನ ನಿಜವಾದ ಫಲಾನುಭವಿಗಳಿಗೆ ತಲುಪಿದರೆ ಸರ್ಕಾರದ ಕೆಲಸ ಸಾರ್ಥಕವಾಗುತ್ತದೆ. ಗ್ರಾಮೀಣರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಹೆಚ್ಚಿನವರಿಗೆ ಅದರ ಬಗ್ಗೆ ಗೊತ್ತಿಲ್ಲ. ಅದನ್ನು ಗೊತ್ತು ಪಡಿಸುವ ಕೆಲಸ ಅಧಿಕಾರಿಗಳು ಮಾಡಬೇಕು’ ಎಂದು ತಿಳಿಸಿದರು.

ADVERTISEMENT

ಜೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ಲೈನ್‌ಮೆನ್‌ಗಳು ವಿದ್ಯುತ್ ಕಂಬಕ್ಕೆ ಅಡ್ಡಲಾಗಿ ಬೆಳೆಯುವ ಮರಗಳ ಕೊಂಬೆಗಳನ್ನು ಕಡಿದ ನಂತರ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಅವುಗಳನ್ನು ಎಸೆಯಬಾರದು. ನಗರವನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಿದರು.

ಜಿಲ್ಲಾ ನೋಡಲ್ ಅಧಿಕಾರಿ ಕುಲದೀಪ್ ಪರಿಹಾರ್ ಮಾತನಾಡಿ, ಸಕಾಲ ಯೋಜನೆ ಅಡಿಯಲ್ಲಿ ವಿದ್ಯುತ್ ಪ್ರಸರಣ ಇಲಾಖೆಯಿಂದ ದೊರಕುವ ಸೇವೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಿರಿಗೇರಿಯ ಧಾತ್ರಿ ರಂಗಸಂಸ್ಥೆ ಕಲಾವಿದರು 'ವಿದ್ಯುತ್; ಹುಟ್ಟು ಬೆಳವಣಿಗೆ' ಕಿರುನಾಟಕ ಪ್ರದರ್ಶಿಸಿದರು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀನಿವಾಸ ಜಿ.ಜೆ, ಜೆಸ್ಕಾಂ ವೃತ್ತದ ಸೂಪರಿಟೆಂಡೆಂಟ್‌ ಎಂಜಿನಿಯರ್ ವೆಂಕಟೇಶಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.