
ಹೊಸಪೇಟೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 91 ಹೊಸ ಕುಷ್ಠರೋಗ ಪ್ರಕರಣಗಳು ಕಂಡು ಬಂದಿದ್ದು, ಈ ಪೈಕಿ 82 ಪ್ರಕರಣಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 99 ಕುಷ್ಠರೋಗ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಡಿ.ಭಾಸ್ಕರ್ ಹೇಳಿದರು.
ನಗರದ ಚಿತ್ತವಾಡ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕುಷ್ಠರೋಗ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜ.30ರಿಂದ ಫೆ.13ರವರೆಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಸ್ತ್ರೀ ಶಕ್ತಿ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ವಿವಿಧ ಶಾಲಾ, ಕಾಲೇಜುಗಳಲ್ಲಿ ವಿಶೇಷವಾಗಿ ಗ್ರಾಮೀಣ ಮಟ್ಟದಲ್ಲಿ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಲಿದ್ದಾರೆ. ರೋಗದ ಗುಣಲಕ್ಷಣಗಳನ್ನು ಗಮನಿಸಿ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಉಂಟಾಗುವ ಅಂಗವೈಕಲ್ಯ ತಡೆಗಟ್ಟಬಹುದು ಎಂದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನೋದ್, ಚಿತ್ತವಾಡ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಸವರಾಜ್, ಡಾ.ಯಶವಂತ್, ಜಿಲ್ಲಾ ಕುಷ್ಠರೋಗ ಸಲಹೆಗಾರ ಡಾ.ಕೊಟ್ರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.