
ಹೊಸಪೇಟೆ (ವಿಜಯನಗರ): ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಮತದಾನದ ಮೂಲಕ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವ ಮತದಾರರ ಪಾತ್ರ ಅತ್ಯಂತ ದೊಡ್ಡದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದಿರಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕಾದರೆ ಕಡ್ಡಾಯ ಮತದಾನ ಅಗತ್ಯ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, 2011ರಿಂದ ಪ್ರತಿವರ್ಷ ಮತದಾರರ ದಿನವನ್ನು ಆಚರಿಸಲಾಗುತ್ತಿದ್ದು, ಈ ಬಾರಿ 'ನನ್ನ ಭಾರತ, ನನ್ನ ಮತ' ಎಂಬ ಘೋಷವಾಕ್ಯದಡಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಬೂತ್ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್ಓ ಗಳನ್ನು ಸನ್ಮಾನಿಸಲಾಯಿತು.
ಎಸ್‌ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ನಗರಸಭೆ ಪೌರಾಯುಕ್ತ ಎ.ಶಿವಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.