ADVERTISEMENT

ಚಡಚಣ ಗುರುದೇವಾಶ್ರಮದ ಗೋಶಾಲೆಗೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2012, 5:20 IST
Last Updated 10 ಫೆಬ್ರುವರಿ 2012, 5:20 IST

ಚಡಚಣ: ಸ್ಥಳೀಯ ಗುರುದೇವಾಶ್ರಮದಲ್ಲಿ ನಡೆಯುತ್ತಿರುವ ಗೋಶಾಲೆಗೆ ಈಚೆಗೆ ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದ ಅವರು ಗೋಶಾಲೆಗೆ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶ್ರೀಶೈಲ ಬಿರಾದಾರ, ಪ್ರತಿ ಜಾನುವಾರಿಗೆ ನೀಡುತ್ತಿರುವ 5 ಕೆ.ಜಿ. ಮೇವು ಏತಕ್ಕೂ ಸಾಲುತ್ತಿಲ್ಲ. ಇದರಿಂದ ಜಾನುವಾರುಗಳು ಉಪವಾಸ ಬೀಳುವ ಸಮಸ್ಯೆ ಉಂಟಾಗುತ್ತಿದೆ. ಕೂಡಲೇ 10 ಕೆ.ಜಿ. ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇನ್ನೂ ಹಲವು ರೈತರು ಗೋಶಾಲೆಯಲ್ಲಿ ನೀರಿನ ಸಮಸ್ಯೆ, ಮೇವಿನ ಸಮಸ್ಯೆ ಉಂಟಾಗುತ್ತಿರುವುದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಗುರುದೇವಾಶ್ರಮದ ಯೋಗಾನಂದ ಸ್ವಾಮೀಜಿ ಮಾತನಾಡಿ, ಆಶ್ರಮದ ಅಡಿಯಲ್ಲಿ ನಡೆಸುತ್ತಿರುವ ಚಡಚಣ ಮತ್ತು ಕಾತ್ರಾಳ ಗೋಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದ ಅವರು, ಜಾನುವಾರುಗಳಿಗೆ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಜಿ.ಎಲ್. ಮೇತ್ರಿ, ಉಪ ವಿಭಾಗಾಧಿಕಾರಿ ಅಶೋಕ ಜಿರ್ಲಿ, ಎಂಜಿನಿಯರ್ ಎಸ್.ಜಿ. ಕಗ್ಗೋಡ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಬಿ. ಕುಂಬಾರ, ವಿಶೇಷ ತಹಶೀಲ್ದಾರ ನಾರಾಯಣಕರ, ತಾ.ಪಂ. ಸದಸ್ಯ ರಾಮ ಅವಟಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.