ADVERTISEMENT

‘ದೌರ್ಬಲ್ಯ ಮೆಟ್ಟಿ ನಿಂತರೆ ಸಾಧನೆ’

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 9:05 IST
Last Updated 19 ಜೂನ್ 2018, 9:05 IST
ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಂಕವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು
ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಂಕವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು   

ವಿಜಯಪುರ: ‘ದೌರ್ಬಲ್ಯ ದೇಹಕ್ಕೆ ಹೊರತು ಮನಸ್ಸಿಗಲ್ಲ. ನಮ್ಮಲ್ಲಿನ ದೌರ್ಬಲ್ಯವನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಮೇಟಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ 2017–18ನೇ ಸಾಲಿನ ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಂಗವಿಕಲರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಸವಲತ್ತುಗಳನ್ನು ಯೋಜನೆಗಳ ಮೂಲಕ ಒದಗಿಸಿದೆ. ಅವುಗಳನ್ನು ಸದುಪಯೋಗ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಿ, ಇತರರಿಗಿಂತ ನೀವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು. ನಾನು ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡುತ್ತೇನೆ. ಮುಂದೆಯೂ ಉತ್ತಮ ಯೋಜನೆಗಳಿಗೆ ಬೆಂಬಲ ಇರುತ್ತದೆ. ಜಿಲ್ಲಾ ಪಂಚಾಯಿತಿ ಸದಸ್ಯರು ಸಹ ಕೈ ಜೋಡಿಸುತ್ತಾರೆಂಬ ನಂಬಿಕೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ವಿ.ಕುಂಬಾರ ಮಾತನಾಡಿ ‘ಜಿಲ್ಲೆಯ ಎಲ್ಲ ಜಿಲ್ಲಾ ಪಂಚಾಯಿತಿ ಮತ ಕ್ಷೇತ್ರಗಳಿಂದ ಸದಸ್ಯರ ಶಿಫಾರಸ್ಸು ಹಾಗೂ ಅರ್ಹತೆ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ₹30.15 ಲಕ್ಷ ಅನುದಾನದಲ್ಲಿ 47 ತ್ರಿಚಕ್ರ ವಾಹನಗಳನ್ನು ಖರೀದಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ’ ಎಂದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿ.ಜಿ.ಉಪಾಧ್ಯೆ, ‘ಕಳೆದ ಐದು ವರ್ಷದಲ್ಲಿ 850ಕ್ಕೂ ಹೆಚ್ಚು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳ ಯೋಜನೆಯ ಲಾಭ ಒದಗಿಸಿದ್ದೇವೆ. ಕಳೆದ ಜಿಲ್ಲಾ ಪಂಚಾಯಿತಿ ಅವಧಿಯಲ್ಲಿ ಸುಮಾರು ₹42 ಲಕ್ಷ ವೆಚ್ಚದಲ್ಲಿ 73 ತ್ರಿಚಕ್ರ ವಾಹನಗಳನ್ನು ವಿತರಿಸಲಾಗಿತ್ತು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪ್ರಭುಗೌಡ ದೇಸಾಯಿ, ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.