ADVERTISEMENT

ಫಲಿತಾಂಶ ಹೆಚ್ಚಳಕ್ಕೆ ಶ್ರಮ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2011, 9:00 IST
Last Updated 14 ಫೆಬ್ರುವರಿ 2011, 9:00 IST

ವಿಜಾಪುರ: ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿ ಎಸ್.ಎಸ್.ಎಲ್.ಸಿ. ಫಲಿತಾಂಶದ ಮೇಲೆ ಅವಲಂಬನೆಯಾಗಿದೆ. ಪ್ರಸಕ್ತ ವರ್ಷ ಈ ಫಲಿತಾಂಶ ರಾಜ್ಯದ ಮೊದಲ ಐದು ಜಿಲ್ಲೆಗಳ ಪಟ್ಟಿಯಲ್ಲಿರುವಂತೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎ.ಎನ್. ಪಾಟೀಲ ಹೇಳಿದರು.

ಸ್ಥಳೀಯ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗಾಗಿ ಹಮ್ಮಿಕೊಂಡಿದ್ದ 2010-11 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪೂರ್ವ ತಯಾರಿಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದಲ್ಲಿ ವಿಜಾಪುರ ಜಿಲ್ಲೆ ರಾಜ್ಯದಲ್ಲಿ 16 ನೇ ಸ್ಥಾನದಲ್ಲಿದೆ.  ಜಿಲ್ಲೆಯ ಅಭಿವೃದ್ಧಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸೂಚ್ಯಂಕದಿಂದ ಅಳೆಯಲಾಗುತ್ತದೆ. ಅದಕ್ಕೆ ಆರೋಗ್ಯ, ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಮಾನದಂಡವಾಗುತ್ತವೆ. ಶಿಕ್ಷಣ ಹಾಗೂ ಆರೋಗ್ಯ ದೃಷ್ಟಿಯಿಂದ ಜಿಲ್ಲೆ ಬಹು ಹಿಂದುಳಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ. ಹಿರೇಮಠ ಪ್ರಾಸ್ತವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಸರಣಿ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಬೇಕು. ಶೀಘ್ರವೇ ಮೌಲ್ಯಮಾಪನ ಮಾಡಿ ತಪ್ಪುಗಳನ್ನು ಕಂಡು ಹಿಡಿದು ಅವುಗಳನ್ನು ಪರಿಹರಿಸಲು ಸತತವಾಗಿ ಪ್ರಯತ್ನಿಸಬೇಕು. ಇದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಿಸಬಹುದು ಎಂದು ವಿವರಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯ ನೋಡಲ್ ಅಧಿಕಾರಿ ಹಾಗೂ ವಿಜ್ಞಾನ ವಿಷಯ ಪರಿವೀಕ್ಷಕ ಡಾ. ಅಶೋಕ ಲಿಮಕರ, ಕಳೆದ ವರ್ಷದ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪ್ರತಿ ಶಾಲೆಯ ಫಲಿತಾಂಶವನ್ನು ವಿಶ್ಲೇಷಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎಸ್. ಹತ್ತಳ್ಳಿ, ಆರ್.ವೈ. ಕೊಣ್ಣೂರ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣದ ಎಸ್.ಎ. ಮುಜಾವರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಟಿ.ಎಚ್. ಮೇಲಿನಕೇರಿ ಹಾಗೂ ವಿಷಯ ಪರಿವೀಕ್ಷಕರು ಉಪಸ್ಥಿತರಿದ್ದರು. ಜಿಲ್ಲೆಯ 400ಕ್ಕೂ ಹೆಚ್ಚು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.