ADVERTISEMENT

`ಮಕ್ಕಳ ವಿಕಸನದಲ್ಲಿ ಪಾಲಕರ ಪಾತ್ರ ಮಹತ್ವದ್ದು'

​ಪ್ರಜಾವಾಣಿ ವಾರ್ತೆ
Published 17 ಜುಲೈ 2013, 6:06 IST
Last Updated 17 ಜುಲೈ 2013, 6:06 IST

ಬಸವನಬಾಗೇವಾಡಿ: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಮತ್ತು ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿದೆ.  ಆ ನಿಟ್ಟಿನಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ  ಎಂದು ಸಿಂದಗಿಯ ಅಂಜುಮನ್ ಕಾಲೇಜಿನ ಪ್ರಾಚಾರ್ಯ ಎಂ.ಡಿ.ಬಳಗಾನೂರ ಹೇಳಿದರು.

ಸ್ಥಳೀಯ ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.

ಮುಸ್ಲಿಂ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಪ್ರತಿಯೊಬ್ಬರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಸಹ ಮುಖ್ಯವಾಗಿದೆ. ಸರ್ಕಾರ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಹಾಫೀಜ್ ಮಹಮ್ಮದ್ ಅಲಿ ಮಾತನಾಡಿ, ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯು ಮುಸ್ಲಿಂ ಸಮುದಾಯದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅವರಿಗೆ ಕಲಿಕಾ ಸಾಮಗ್ರಿಗಳನ್ನು ನೀಡುತ್ತಿದೆ. ಸಂಘಟನೆ ಶ್ರಮ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಅದು ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಚಾಂದಬಾಷಾ ಕೊರಬು, ನಿವೃತ್ತ ಶಿಕ್ಷಕ ಚಳ್ಳಿಗಿಡದ ಮಾತನಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಅಲ್ತಾಫ್ ಹುಸೇನ್ ಪ್ರಾಸ್ತಾವಿಕ ಮಾತನಾಡಿದರು. ಹಾಜಿ ಡಿ.ಎ.ಮಕಾನದಾರ ಅಧ್ಯಕ್ಷತೆ ವಹಿಸಿದ್ದರು. ಎಂ.ಆರ್.ಚಪ್ಪರಬಂದ್ ಸ್ವಾಗತಿ ಸಿದರು. ಇದೇ ಸಂದರ್ಭದಲ್ಲಿ 25 ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.