ವಿಜಾಪುರ: ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯ ವಿವಾಹ ತಡೆ ಎಲ್ಲ ಅಧಿಕಾರಿಗಳ ಕರ್ತವ್ಯ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸುವುದಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ.ಶಿವಕುಮಾರ ಎಚ್ಚರಿಸಿದರು.
ಮಕ್ಕಳ ಸಹಾಯವಾಣಿ ಕುರಿತಂತೆ ಶುಕ್ರವಾರ ಇಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಅಸಹಾಯಕ ಹಾಗೂ ಸಂಕಷ್ಟದಲ್ಲಿ ಇರುವ ಮಕ್ಕಳ ರಕ್ಷಣೆ, ಬಾಲ್ಯವಿವಾಹ ತಡೆ ಎಲ್ಲ ಅಧಿಕಾರಿಗಳ ಕರ್ತವ್ಯ. ಕೇವಲ ಸ್ವಯಂ ಸೇವಾ ಸಂಸ್ಥೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.
ಮಕ್ಕಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ಸಹಾಯ ವಾಣಿಯನ್ನು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ಸ್ಥಾಪಿ ಸಿದೆ. ತುರ್ತು ದೂರವಾಣಿ ಕರೆಯನ್ನು ಹಿಂಬಾಲಿಸಿ, ಅವಶ್ಯಕತೆ ಇರುವ ಮಕ್ಕಳಿಗೆ ಪಾಲನೆ, ಪೋಷಣೆ ಮತ್ತು ರಕ್ಷಣೆಯನ್ನು ಒದಗಿಸಲಾಗುವುದು. ಇದಕ್ಕಾಗಿ ಶುಲ್ಕ ರಹಿತ 1098 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಈ ಕುರಿತಂತೆ ಶಾಲಾ-ಕಾಲೇಜು, ವಿವಿಧ ಸರ್ಕಾರಿ ಕಚೇರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಬರೆಯಿಸಬೇಕು ಎಂದರು.
ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ತಡೆಗೆ ಪೊಲೀಸರ ಸಹಕಾರ ಅವಶ್ಯವಿದ್ದು, ಮಕ್ಕಳ ಸಹಾಯವಾಣಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಪೊಲೀಸರು ಸಹಕರಿಸಬೇಕು. ಬಾಲ್ಯ ವಿವಾಹದಂಥ ಸಂದರ್ಭದಲ್ಲಿ ಕಡ್ಡಾಯವಾಗಿ ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಜರಿರಬೇಕು.
ಮಕ್ಕಳ ವಯೋಮಾನದ ಬಗ್ಗೆ ಪರಿಶೀಲನೆ ನಡೆಸಬೇಕು. ಸಾಮೂಹಿಕ ವಿವಾಹ ನೋಂದಣಿ ಮತ್ತು ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಸ್ವಯಂಪ್ರೇರಿತರಾಗಿ ಸಮಾಜ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಹಿಂದುಳಿದ ಇಲಾಖೆ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ದೂರು ದಾಖಲಿಸುವಂತೆ ಸೂಚಿಸಿದರು.
ಮಕ್ಕಳ ಸಹಾಯವಾಣಿಯ ಸುನಂದಾ ತೋಳಬಂದಿ, ವಾಸುದೇವ ತೋಳಬಂದಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೋಹಿಣಿ ಹಿರೇಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಗುಂಡಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಆರ್.ಎಂ.ಸಜ್ಜನ, ಕಾರ್ಮಿಕ ಅಧಿಕಾರಿ ಪಾಟೀಲ, ಅಂಗವಿಕಲರ ಕಲ್ಯಾಣಾಧಿ ಕಾರಿ ವಿ.ಜಿ.ಉಪಾಧ್ಯೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ದೊಡಮನಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.