ADVERTISEMENT

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನೀಗಿಸಿ

ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ ಯುವ ಮುಖಂಡ ಸಂಗಮೇಶ ಬಬಲೇಶ್ವರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 13:47 IST
Last Updated 10 ನವೆಂಬರ್ 2022, 13:47 IST
ವಿಜಯಪುರ ನಗರದ ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಗುರುವಾರ ಪ್ರಶಸ್ತಿ ವಿತರಿಸಿ  ಕಾಂಗ್ರೆಸ್‌ ಯುವ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿದರು
ವಿಜಯಪುರ ನಗರದ ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಗುರುವಾರ ಪ್ರಶಸ್ತಿ ವಿತರಿಸಿ  ಕಾಂಗ್ರೆಸ್‌ ಯುವ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿದರು   

ವಿಜಯಪುರ: ರಾಜ್ಯ ಸರ್ಕಾರ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯನ್ನು ನೀಗಿಸಿ ಮಕ್ಕಳನ್ನು ಸದೃಢರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಯುವ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದರು.

ನಗರದ ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಗುರುವಾರ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ಭಾರತದ ಭವಿಷ್ಯದ ನಾಗರಿಕರಾಗಿದ್ದಾರೆ. ಆದರೆ, ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನೀಡಲು ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ. ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಶಿಕ್ಷಕರ ಕೊರತೆ ಸೇರಿದಂತೆ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಹೇಳಿದರು.

ADVERTISEMENT

ವಿದ್ಯಾರ್ಥಿಗಳ ಜೀವನದಲ್ಲಿ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮಾರ್ಗದರ್ಶಕರಾಗಿ ಜೀವ ತುಂಬುತ್ತಾರೆ. ಪ್ರತಿಯೊಂದು ಶಿಕ್ಷಣ ಸಂಸ್ಥೆಯ ಆತ್ಮದಂತೆ ಕೆಲಸ ಮಾಡುತ್ತಾರೆ. ಹೀಗಾಗಿ ದೈಹಿಕ ಶಿಕ್ಷಣ ಶಿಕ್ಷಕರು ಸದೃಢ ರಾಷ್ಟ್ರ ನಿರ್ಮಾಣದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಬಿ.ಎಲ್.ಡಿ.ಇ. ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್.ಪಾಟೀಲ ಮಾತನಾಡಿ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕ್ರೀಡೆಯೂ ಬಹುಮುಖ್ಯವಾಗಿದೆ. ಎರಡನ್ನೂ ವಿದ್ಯಾರ್ಥಿಗಳು ಶ್ರದ್ಧೆಯಿಂದ ಮಾಡಿದರೆ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದರು.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಮಂಡ್ಯ ತಂಡಕ್ಕೆ ಟ್ರೋಫಿ ಮತ್ತು ₹15 ಸಾವಿರ ನಗದು ಬಹುಮಾನ ವಿತರಿಸಲಾಯಿತು. ಎರಡನೇ ಸ್ಥಾನ ಪಡೆದ ಮೈಸೂರು ಬಾಲಕಿಯರ ತಂಡಕ್ಕೆ ಟ್ರೋಫಿ ಮತ್ತು ₹10 ಸಾವಿರ ನಗದು ಬಹುಮಾನ ನೀಡಲಾಯಿತು.

ಬಾಲಕರ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ಮೈಸೂರು ತಂಡಕ್ಕೆ ಟ್ರೋಫಿ ಮತ್ತು ₹15 ಸಾವಿರ ನಗದು ಹಾಗೂ ದ್ವಿತೀಯ ಸ್ಥಾನ ಪಡೆದ ದಾವಣಗೆರೆ ತಂಡಕ್ಕೆ ಟ್ರೋಫಿ ಹಾಗೂ ₹ 10 ಸಾವಿರ ನಗದು ಬಹುಮಾನ ವಿತರಿಸಲಾಯಿತು.

ಬಿ.ಎಲ್.ಡಿ.ಇ. ಸಂಸ್ಥೆಯ ವತಿಯಿಂದ ವಿಜೇತ ತಂಡಗಳಿಗೆ ಟ್ರೋಫಿ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರ ವತಿಯಿಂದ ನಗದು ಬಹುಮಾನ ನೀಡಲಾಯಿತು.

ಬಿ.ಎಲ್.ಡಿ.ಇ. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಆರ್.ಕೊಟ್ನಾಳ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಬಿ.ಆರ್.ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್.ಕೋರಿ, ದೈಹಿಕ ಸಹಾಯಕ ನಿರ್ದೇಶಕ ಕೈಲಾಸ ಹಿರೇಮಠ, ಬಿ.ಎಲ್.ಡಿ.ಇ. ಸಂಸ್ಥೆಯ ಕಚೇರಿ ಅಧೀಕ್ಷಕ ಎಸ್.ಎ.ಬಿರಾದಾರ, ಪಿಯು ಇಲಾಖೆ ಉಪನಿರ್ದೇಶಕ ಎಸ್.ಎನ್.ಬಗಲಿ, ಪ್ರಾಚಾರ್ಯ ಸಿ.ಬಿ.ಪಾಟೀಲ, ಡಾ. ಜಿ.ಡಿ.ಅಕಮಂಚಿ, ಎಲ್.ಬಿ.ಪಾಟೀಲ, ಸಂತೋಷ ಲೋಕುರಿ, ಮಧುಸೂದನ ಮಾಗಿ, ವಿ.ಟಿ.ಗೊಂಬಿ, ಎಸ್.ಬಿ.ಗೋಗಿ, ವಿ.ಎಸ್.ಹಂಜಿ, ಎಸ್.ಆರ್.ಮುತ್ತಗಿ,ವಾಣಿಶ್ರೀ ಹಿರೇಮಠ, ಎಸ್.ಪಿ.ಶೇಗುಣಸಿಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.