ವಿಜಯಪುರ: ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ‘ಮಾತುಕೊಟ್ಟಂತೆ ನಡೆದುಕೊಳ್ಳಬೇಕು’ ಎಂದು ಆಗ್ರಹಿಸಿ ಆಗಸ್ಟ್ 12ರಿಂದ 14ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗ್ಯಾರಂಟಿಯನ್ನು ಕಳೆದ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಜೆಟ್‍ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು, ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಆಗ್ರಹಿಸಿದರು.
ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯ ಅವೈಜ್ಞಾನಿಕ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಆಶಾಗಳಿಗೆ ₹2ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
2025ರ ಜೂನ್, ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಆಶಾ ಮುಖಂಡರಾದ ಲಕ್ಷ್ಮೀ ಸೀಮಿಕೇರಿ, ಬಸಮ್ಮ ಹೆಳವರ, ಅಂಬಿಕಾ ಒಳಸಂಗ, ಮಲ್ಲಮ್ಮ ಹರಿಜನ, ಸುಮಂಗಲಾ ಪಡಸಾಲಿ, ಬಸಮ್ಮ ಪಾಟೀಲ, ಮಲ್ಲಮ್ಮ ಕಂಠಿ, ಸಂಘಟನಾಕಾರರಾದ ಶಿವಬಾಳಮ್ಮ ಕೊಂಡಗೂಳಿ, ಶಿವರಂಜನಿ ಎಸ್.ಬಿ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.