
ಮುದ್ದೇಬಿಹಾಳ: ದಿ ಕರ್ನಾಟಕ ಕೋ–ಆಪ್ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬ್ಯಾಂಕಿನ ನೇಮಕಾತಿ ಸಮಿತಿ ಮತ್ತು ಪ್ರಧಾನ ವ್ಯವಸ್ಥಾಪಕರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕನಗೌಡ ಪಾಟೀಲ ಅವರು ಮಂಗಳವಾರ ಮನವಿ ಸಲ್ಲಿಸಿದರು.
‘2025ರ ನವೆಂಬರ್ 30ರಂದು ನಡೆದಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಈಚೆಗೆ ಪ್ರಕಟಿಸಲಾಗಿದೆ. ಫಲಿತಾಂಶವು ಪಾರದರ್ಶಕವಾಗಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಪರೀಕ್ಷೆ ಬರೆದ ನಾಲ್ಕು ಅಭ್ಯರ್ಥಿಗಳು ಮಾತ್ರ ಕ್ರಮವಾಗಿ 164, 165, 166, 167 ಅಂಕ ಪಡೆದಿರುವುದು ಸಂಶಯಕ್ಕೆ ಕಾರಣವಾಗಿದೆ’ ಎಂದರು.
‘ಉದ್ದೇಶಪೂರ್ವಕವಾಗಿ ತಮಗೆ ಬೇಕಾದವರಿಗೆ ನಕಲು ಮಾಡಿಸಿ, ಆಯ್ಕೆ ಮಾಡಿರುವ ಶಂಕೆ ಇದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಪರೀಕ್ಷೆ ಸಂದರ್ಭದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಬೇಕು. ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.
‘ಈ ಕುರಿತು ಬೆಂಗಳೂರಿನ ಸಿ.ಎಂ.ಆರ್. ವಿಶ್ವವಿದ್ಯಾಲಯದ ಕುಲಸಚಿವರು, ಸಿಬ್ಬಂದಿ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ, ಸಹಕಾರ ಸಂಘಗಳ ಇಲಾಖೆಯ ಜಿಲ್ಲಾ ರಿಜಿಸ್ಟ್ರಾರ್, ಜಂಟಿ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.