ADVERTISEMENT

ಬಸವನಬಾಗೇವಾಡಿ: ‘ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಿ’

​ಪ್ರಜಾವಾಣಿ ವಾರ್ತೆ
Published 14 ಮೇ 2025, 15:57 IST
Last Updated 14 ಮೇ 2025, 15:57 IST
ಬಸವನಬಾಗೇವಾಡಿಯ ಭಾರತ ಸೇವಾದಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಬಸವನಬಾಗೇವಾಡಿಯ ಭಾರತ ಸೇವಾದಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಬಸವನಬಾಗೇವಾಡಿ: ‘ಶಿಕ್ಷಕರು ಸರ್ಕಾರಿ ಶಾಲೆಯತ್ತ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಮುದಾಯವನ್ನು ತೊಡಗಿಸಿಕೊಂಡು ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ದಾಖಲಾತಿ, ಹಾಜರಾತಿ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯತೆ ಇದೆ’ ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿನ ಭಾರತ ಸೇವಾದಳ ಕಚೇರಿ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಮಧ್ಯಾಹ್ನ ಬಿಸಿಯೂಟ ಯೋಜನೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕೇವಲ ಶಿಕ್ಷಕರಿಗೆ ಮಾತ್ರ ಸಿಮೀತವಾಗಿಲ್ಲ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪಾಲಕರು ಸೇರಿದಂತೆ ಸಾರ್ವಜನಿಕರು ಸಹಭಾಗಿತ್ವ ಮುಖ್ಯ. ಜನಸಂದಣಿ ಸೇರುವ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ನಡೆಸಿದರೆ ಇನ್ನಷ್ಟು ಪ್ರಭಾವಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಲು ಕಾರಣ ತಿಳಿದುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಅದನ್ನು ಪಾಲಕರಿಗೆ ಮನವರಿಕೆ ಮಾಡುವ ಕೆಲಸವಾಗಬೇಕಿದೆ’ ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯತಿ ಇಒ ಪ್ರಕಾಶ ದೇಸಾಯಿ ಮಾತನಾಡಿ, ‘ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳು ದೊರೆಯುತ್ತಿವೆ’ ಎಂದು ಹೇಳಿದರು.

ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಚಾರ್ಯ ರಮೇಶ ಪೂಜಾರಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಸ್.ಎಚ್.ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಸುನಿಲ ನಾಯಕ ಮಾತನಾಡಿದರು.

ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೊಳಸಂಗಿ, ಪ್ರಚಾರ್ಯ ಎಸ್.ಡಿ.ಪಾಟೀಲ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಆರ್.ಲಮಾಣಿ, ಮಹೇಶ ಪೂಜಾರಿ, ಭಾರತಿ ಪಾಟೀಲ ಸೇರಿದಂತೆ ಮುಖ್ಯ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪಾಲಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.