
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭದಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು
ಬಸವನಬಾಗೇವಾಡಿ: ಪ್ರತಿಭೆ ಯಾರ ಮನೆಯ ಸ್ವತ್ತಲ್ಲ. ಅದಕ್ಕೆ ಗಂಡು-ಹೆಣ್ಣೆಂಬ ಭೇದವಿಲ್ಲ. ಬಸವಾದಿ ಶರಣರು ಸಮಾಜವನ್ನು ಕಟ್ಟಿದ ರೀತಿಯೂ ಕೂಡ ವೃತ್ತಿ ಕೌಶಲದ ಪ್ರತಿಭೆಗಳದ್ದು ಇದೇ ಮಾದರಿಯದ್ದಾಗಿತ್ತು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಸವಣ್ಣನವರು ಗಂಡು-ಹೆಣ್ಣಿನ ಮಧ್ಯೆ ಯಾವ ವ್ಯತ್ಯಾಸವಿಲ್ಲ ಎಂದು ಪ್ರತಿಪಾದಿಸಿ, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದರು. ಪರಿಣಾಮ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಮಹಿಳೆಯರು ಎಲ್ಲ ರಂಗದಲ್ಲೂ ಪುರುಷರಿಗೆ ಸಮನಾಗಿ ಪೈಪೋಟಿ ನೀಡುತ್ತಿದ್ದಾರೆ ಎಂದರು.
ವಿರಕ್ತ ಮಠದ ಸಿದ್ಧಲಿಂಗ ಶ್ರೀ ಸಾನ್ನಿಧ್ಯ ವಹಿಸಿದ್ದರು. ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಈರಣ್ಣ ಸಿ. ಪಟ್ಟಣಶೆಟ್ಟಿ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ತಹಶೀಲ್ದಾರ್ ವೈ.ಎಸ್. ಸೋಮನಕಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬಿ.ಬಾರಿಕಾಯಿ, ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಸಿದ್ದು ಉಕ್ಕಲಿ, ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಡಿ.ಪವಾರ, ಶಿಕ್ಷಕರ ಸಂಘದ ಪ್ರಮುಖರಾದ ಅಶೋಕ ಗಿಡ್ಡಪ್ಪಗೋಳ, ಶ್ರೀನಾಥ ದೊಡಮನಿ, ಸುರೇಶ ಬಿರಾದಾರ ಇದ್ದರು. ಬಿಇಒ ವಸಂತ ರಾಠೋಡ ಸ್ವಾಗತಿಸಿದರುಲ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ ನಿರೂಪಿಸಿದರು. ಎಸ್.ಎ.ಅಂಬಲಿ ವಂದಿಸಿದರು.
ನಿನ್ನೆಯಷ್ಟೇ ಅಂಧರ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತೀಯ ಯುವತಿಯರ ಪಡೆಯೂ ಸ್ಫೂರ್ತಿದಾಯಕ ರೀತಿಯಲ್ಲಿ ಸಾಧನೆ ಮೆರೆದಿದೆ. ಇದಕ್ಕಾಗಿ ವಿಜೇತ ಭಾರತೀಯ ತಂಡವನ್ನು ಅಭಿನಂದಿಸುತ್ತೇನೆ- ಶಿವಾನಂದ ಪಾಟೀಲ, ಸಚಿವರು, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.