
ವಿಜಯಪುರ: ‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾರ್ಚ್ 9ರಂದು ನಗರದಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ನಡೆಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿವಾರಣೆ ಹಾಗೂ ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಈ ಕಾರ್ಯಕ್ರಮದ ಪ್ರಮುಖ ಅಂಶವಾಗಿರಲಿದೆ. ಭೀಮನ ಆದರ್ಶಗಳನ್ನು ಸ್ವರಗಳ ಮೂಲಕ ಜನಮನಗಳಿಗೆ ತಲುಪಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಸಂಭ್ರಮವೇ ಭೀಮ ಗಾಯನ’ ಎಂದು ಅವರು ವಿವರಿಸಿದರು.
‘ಚಿಂತಾಮಣಿಯ ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದೆ. ಅಂಬೇಡ್ಕರ್ ಭೇಟಿ ನೀಡಿದ ರಾಜ್ಯದ ಆಯ್ದ ಪ್ರಮುಖ ಸ್ಥಳಗಳಲ್ಲಿ ಭೀಮ ಗಾಯನ ಆಯೋಜಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
‘ಕಾರ್ಯಕ್ರಮವನ್ನು ಜನನಿಬಿಡ ಪ್ರದೇಶದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರು, ಧ್ವನಿವರ್ಧಕ ಮತ್ತು ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸುವುದಕ್ಕೂ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.
ಅಡಿವೆಪ್ಪ ಸಾಲಗಲ್, ಶ್ರೀನಾಥ ಪೂಜಾರಿ ಹಾಗೂ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿವಾನಂದ ಬ್ಯಾಹಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಸ್ಯಾಸಕ ರುದ್ರಯ್ಯ ಸಿ.ಹಿರೇಮಠ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಎಂ.ಆರ್. ಗುರಿಕಾರ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೆಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಾರ್ವಜನಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.