ವಿಜಯಪುರ:ರಾಜ್ಯ ಸರ್ಕಾರದ ಕಾರ್ಯವೈಖರಿ ಟೀಕಿಸಿದರು ಎಂಬ ಒಂದೇ ಕಾರಣಕ್ಕೆ ಕೆಲ ಪತ್ರಕರ್ತರು, ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ ಕಾರ್ಯ ವೈಖರಿ ಖಂಡಿಸಿ, ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಮುಖಂಡರು, ನಂತರ ಅಲ್ಲಿಂದ ಮೌನ ಮೆರವಣಿಗೆ ಮೂಲಕ, ಜಿಲ್ಲಾಧಿಕಾರಿ ಕಚೇರಿಗೆ ತಲುಪಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಮಾತನಾಡಿ ‘ಗೃಹ ಸಚಿವ ಎಂ.ಬಿ.ಪಾಟೀಲ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವತಃ ಎಂ.ಬಿ.ಪಾಟೀಲ ಪ್ರತ್ಯೇಕ ಲಿಂಗಾಯತ ಧರ್ಮದ ಮುಂಚೂಣಿ ವಹಿಸಿಕೊಂಡಿದ್ದರು. ಇದನ್ನು ಖಂಡಿಸಿದ ಕೆಲವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸುವಂತೆ ಮಾಡಿರುವುದು ಖಂಡನೀಯ. ಶಾರದಾ ಡೈಮಂಡ್, ಶೃತಿ ಬೆಳ್ಳಕ್ಕಿ, ಮಹೇಶ ಹೆಗಡೆ ಮೊದಲಾದವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದು ಗೃಹ ಸಚಿವರ ಗೂಂಡಾಗಿರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ ‘ವಿವಿಧ ಪ್ರಕರಣಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 370ರ ಅನ್ವಯ ಪ್ರಕರಣ ದಾಖಲಾಗಿವೆ. ಆದರೆ ಕೇವಲ ಬಿಜೆಪಿ ಕಾರ್ಯಕರ್ತರನ್ನು ಮಾತ್ರ ಬಂಧಿಸಲಾಗಿದೆ. ಇದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.
‘ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಜೆಡಿಎಸ್ ಶಾಸಕ ನಾರಾಯಣಗೌಡ ಚಲನಚಿತ್ರ ನಟರಾದ ದರ್ಶನ್, ಯಶ್‌ಗೆ ಬೆದರಿಕೆ ಹಾಕಿದ್ದರೂ ಬಂಧಿಸಿಲ್ಲ. ಇದು ಯಾವ ನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ, ಆರ್.ಎಸ್.ಪಾಟೀಲ ಕೂಚಬಾಳ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ, ದಯಾಸಾಗರ ಪಾಟೀಲ, ಸಂಜುಗೌಡ ಪಾಟೀಲ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.