ADVERTISEMENT

ಕೃಷ್ಣಾ ಮೇಲ್ದಂಡೆ: ಬಿಜೆಪಿ ದ್ವಂದ್ವ 

ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ: ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಆರೋಪ

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 16:20 IST
Last Updated 14 ಜೂನ್ 2025, 16:20 IST
ವಿಜಯಪುರ ನಗರಕ್ಕೆ ಶನಿವಾರ ಆಗಮಿಸಿದ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ  ಅವರನ್ನು ಬೈಕ್ ರ‍್ಯಾಲಿ ಮೂಲಕ ಸ್ವಾಗತಿಸಲಾಯಿತು
ವಿಜಯಪುರ ನಗರಕ್ಕೆ ಶನಿವಾರ ಆಗಮಿಸಿದ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ  ಅವರನ್ನು ಬೈಕ್ ರ‍್ಯಾಲಿ ಮೂಲಕ ಸ್ವಾಗತಿಸಲಾಯಿತು   

ವಿಜಯಪುರ: ‘ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಷಯದಲ್ಲಿ ಬಿಜೆಪಿ ದ್ವಂದ್ವ ನಿಲುವು ಹೊಂದಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಎಚ್‌.ಎಸ್. ಆರೋಪಿಸಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿಯು ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯದ ಗೇಟ್ ಎತ್ತರಿಸುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಈ ವಿಷಯದಲ್ಲಿ ವ್ಯತಿರಿಕ್ತವಾಗಿ ಮಾತನಾಡುತ್ತಿದೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಾರಥ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರು ಸಂತೃಪ್ತಿ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಪರವಾದ ಇಂತಹ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದಾರೆ’ ಎಂದು ಆರೋಪಿಸಿದರು.

‘ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸಬೇಕು. ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಹಾಗೂ ಪಕ್ಷ ಅಧಿಕಾರ ಹಿಡಿಯುವಂತೆ ಶ್ರಮಿಸಬೇಕು’ ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ಸತ್ಯಜಿತ್ ಪಾಟೀಲ, ವಿಜಯಪುರ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಯಿನ್‌ ಶೇಖ್‌, ಕನ್ನನ್ ಮುಸ್ರೀಫ್ ಇದ್ದರು.

Highlights - null

Cut-off box - ‘ಸಮಾಜ ವಿಭಜನೆ: ಜಾಗೃತರಾಗಿ’ ‘ಸಮಾಜದಲ್ಲಿ ಜಾತಿ ಧರ್ಮಗಳ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಿ ಸಮಾಜ ವಿಭಜನೆ ಮಾಡುತ್ತಿರುವ ಬಿಜೆಪಿ ಕುತಂತ್ರದ ಕುರಿತು ಎಚ್ಚರಿಕೆ ವಹಿಸಬೇಕು’ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಎಸ್. ಪಾಟೀಲ ಹೇಳಿದರು. ‘ಧರ್ಮ ಜಾತಿ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಹೊಣೆಯನ್ನು ಯುವಶಕ್ತಿ ಸಮರ್ಥವಾಗಿ ನಿಭಾಯಿಸಬೇಕು. ಕೃಷ್ಣಾ ನದಿ ಯೋಜನೆಗಳ ವಿಷಯದಲ್ಲಿ ದ್ವಿಮುಖ ನೀತಿ ಹೊಂದಿರುವ ಬಿಜೆಪಿ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.